ಬಳ್ಳಾರಿ : ಭಾರತ ಸಂವಿಧಾನದ ತತ್ವ ಮತ್ತು ಆಶೋತ್ತರಗಳನ್ನು ಯುವಕರು, ನಾಗರಿಕರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್ ಮಿಶ್ರಾ ಹೇಳಿದರು.
ನಗರದ ವಿಮ್ಸ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಭಾರತದ ಸಂವಿಧಾನ ಪ್ರಸ್ತಾವನೆಯ ವಾಚನ ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರಸ್ತಾವನೆಯ ಬೋಧನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ದೊರೆತ ನಂತರ ನಮ್ಮ ದೇಶವನ್ನು ರೂಪಿಸುವಲ್ಲಿ ಪ್ರತಿಯೊಬ್ಬರ ಸಮಾನತೆಯ ದೃಷ್ಟಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚಿಸಿ ನಮಗೆ ನೀಡಿದ್ದಾರೆ. ಭಾರತವು ಪ್ರಜಾಸತ್ತಾತ್ಮಕ ರಾಷ್ಟ್ರವಾಗಿದ್ದು, ಪ್ರಪಂಚದ ಇತರ ದೇಶಗಳಿಗಿಂತ ತನ್ನದೆ ಆದ ಮಹತ್ವವನ್ನು ಹೊಂದಿದೆ ಎಂದರು.
ರಾಷ್ಟ್ರದಲ್ಲಿನ ನಮ್ಮ ಸಂವಿಧಾನದ ಮಹತ್ವನ್ನು ಯಾರೂ ಮರೆಯಬಾರದು. ಸಂವಿಧಾನದ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಪಾಲಿಸಬೇಕು ತಿಳಿಸಿದರು.
ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು ಮಾತನಾಡಿ, ಯಾವುದೇ ಕಾಯ್ದೆ, ಕಾನೂನುಗಳಾಗಲಿ ಅವುಗಳ ಜಾರಿ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಸಂವಿಧಾನದ ತತ್ವಗಳನ್ನು ಪಾಲಿಸಬೇಕಾಗುತ್ತದೆ. ನಮ್ಮ ದೇಶವು ವಿವಿಧತೆಯಲ್ಲಿ ಏಕತೆಯನ್ನು ಒಳಗೊಂಡ ರಾಷ್ಟ್ರವಾಗಿದೆ. ಹಲವು ಜಾತಿ-ಧರ್ಮ, ಪಂಗಡ ಮತ್ತು ವಿವಿಧ ಭಾಷೆಗಳನ್ನೊಗೊಂಡ ಒಗ್ಗೂಡಿದ ಜಾತ್ಯತೀತ ರಾಷ್ಟ್ರವಾಗಿದೆ. ಸಂವಿಧಾನದ ಪೀಠಿಕೆಯಲ್ಲಿ ಆಳವಾದ ಜ್ಞಾನ ಅಡಗಿದ್ದು, ಸಮಾಜದಲ್ಲಿನ ನಾಗರಿಕರು, ಯುವಕರು ಹಾಗೂ ವಿದ್ಯಾರ್ಥಿಗಳು ಸಂವಿಧಾನದ ತತ್ವಗಳನ್ನು ಅರಿಯಬೇಕು ಎಂದರು.
ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪ ಮೇಯರ್ ಬಿ.ಜಾನಕಿ, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಅಬಕಾರಿ ಅಧೀಕ್ಷಕ ಎನ್.ಮಂಜುನಾಥ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ.ರವಿ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ, ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸತೀಶ್.ಕೆ.ಎಚ್ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.