ಮಾನ್ವಿ: ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಅತಿಸಾರ, ಕಾಲರಾ, ಡೆಂೆ, ಮಲೇರಿಯಾ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಶರಣಬಸವರಾಜ ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡಿದ್ದ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದ ತಾಲೂಕು ಮಟ್ಟದ ಟಾಸ್ಕಪೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದರು. ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಕಾರ್ಯಕರ್ತರು ಪಟ್ಟಣ ಹಾಗೂ ಗ್ರಾಮಗಳಲ್ಲಿ ಪ್ರತಿ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸುತ್ತಿದ್ದಾರೆ. ರೋಗ ಲಕ್ಷಣ ಹೊಂದಿರುವವರ ಪತ್ತೆ ಹಚ್ಚಿ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ ಎಂದರು.
ತಾಲೂಕಿನಲ್ಲಿ ಎರಡು ಡೆಂೆ ಪ್ರಕರಣಗಳು ದೃಢಪಟ್ಟಿರುವುದರಿಂದ ಪಟ್ಟಣ ಹಾಗೂ ಗ್ರಾಮಗಳಲ್ಲಿ ಸ್ಥಳೀಯ ಆಡಳಿತಗಳು ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಮಳೆಗಾಲದಲ್ಲಿ ಕಲುಷಿತ ನೀರು ಸೇವನೆಯಿಂದ 1 ರಿಂದ 5 ವರ್ಷದೊಳಗಿನ ಮಕ್ಕಳಿಗೆ ತೀವ್ರತರ ಅತಿಸಾರ ಭೇದಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಮೂರು ಸಲಕ್ಕೂ ಹೆಚ್ಚು ಬಾರಿ ಭೇದಿಯಾದಲ್ಲಿ ತಕ್ಷಣವೇ ಅಂತಹ ಮಗುವಿಗೆ ಆರೋಗ್ಯ ಇಲಾಖೆಯಿಂದ ನೀಡುವ ಒಆರ್‌ಎಸ್ ದ್ರಾವಣ ಕುಡಿಸಬೇಕು. ಜಿಂಕ್ ಮಾತ್ರೆಗಳನ್ನು ನೀಡಬೇಕು. ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದರಿಂದ ತಕ್ಷಣ ಚೇತರಿಕೆ ಕಾಣಲು ಸಾದ್ಯ ಎಂದರು.
ಗ್ರೇಡ್-2 ತಹಸೀಲ್ದಾರ್ ಅಬ್ದುಲ್ ವಾಹಿದ್ ಮಾತನಾಡಿ, ಮಳೆಗಾಲದಲ್ಲಿ ಕಾಣಿಸಿಕೊಳ್ಳುವ ಸಾಂಕ್ರಾಮಿಕ ಕಾಯಿಲೆಗಳ ನಿಯಂತ್ರಣಕ್ಕೆ ತಾಲೂಕಿನ ಎಲ್ಲ ಇಲಾಖೆ ಅಧಿಕಾರಿಗಳು ಸಹಕಾರ ನೀಡಬೇಕು ಎಂದರು.
ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಮಾನೆ, ಸಿಡಿಪಿಒ ಮನ್ಸೂರ್ ಅಹಮ್ಮದ್, ತಾಲೂಕು ಕಲ್ಯಾಣಾಧಿಕಾರಿ ಮಹಲಿಂಗಪ್ಪ ಇಂಗಳದಾಳ, ಆರೋಗ್ಯ ಇಲಾಖೆಯ ಡಾ.ಅಂಬಿಕಾ ಮಧುಸೂದನ್, ಶಿಕ್ಷಣ ಇಲಾಖೆ ಅಧಿಕಾರಿ ಶ್ರೀಧರ ದೇಸಾಯಿ, ಬಾಬು ಚಿನ್ನು ಇತರರು ಹಾಜರಿದ್ದರು.