sudhakar 
ಜಿಲ್ಲೆ

ಎಂಬಿಬಿಎಸ್ ತರಗತಿ ನಡೆಸಲು ಅನುಮತಿ ; ಚಿಕ್ಕಬಳ್ಳಾಪುರ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಹಸಿರು ನಿಶಾನೆ

Chikkaballapur

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಾಮಗಾರಿ ನಡೆಯುತ್ತಿರುವ ನಡುವೆ ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡದಲ್ಲಿ 100 ಎಂಬಿಬಿಎಸ್ ಸೀಟುಗಳೊಂದಿಗೆ ತರಗತಿಗಳನ್ನು ನಡೆಸಲು ಅನುಮತಿ ಸಿಕ್ಕಿದೆ.

ಮೊದಲು ವೈದ್ಯಕೀಯ ಶಿಕ್ಷಣದ ಮಾರ್ಗಸೂಚಿ ಮತ್ತು ಮೂಲಸೌಕರ್ಯಗಳ ಅಗತ್ಯದ ಮಾನದಂಡಕ್ಕೆ ಅನುಗುಣವಾಗಿ ಸೌಕರ್ಯಗಳಿಲ್ಲ ಎಂಬ ವರದಿ ಹಿನ್ನೆಲೆಯಲ್ಲಿ ಕಾಲೇಜು ಪ್ರಾರಂಭಕ್ಕೆ ಅವಕಾಶ ನೀಡಿರಲಿಲ್ಲ. ಆದರೆ, ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್ ಒತ್ತಡದ ಹಿನ್ನೆಲೆಯಲ್ಲಿ 2021-22ನೇ ಸಾಲಿನಲ್ಲಿ ತಾತ್ಕಾಲಿಕ ವ್ಯವಸ್ಥೆಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ಸಿಕ್ಕಿದೆ.

ಪ್ರಸ್ತುತ ಜಿಲ್ಲಾ ವ್ಯಾಪ್ತಿಯಲ್ಲಿ ಸುಸಜ್ಜಿತ ಕಟ್ಟಡವನ್ನು ಬಾಡಿಗೆಗೆ ಪಡೆದುಕೊಂಡು ಎಂಬಿಬಿಎಸ್ ಸೀಟು ಭರ್ತಿ, ಸಿಬ್ಬಂದಿ ನೇಮಕಾತಿ ಮತ್ತು ತರಬೇತಿಗೆ ಅಗತ್ಯ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ಕಟ್ಟಡದ ಹುಡುಕಾಟ ಪ್ರಕ್ರಿಯೆ ಪ್ರಾರಂಭವಾಗಿದೆ. ಸಚಿವರ ಒಡೆತನದಲ್ಲಿರುವ ಪೆರೇಸಂದ್ರದಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆ ಕಟ್ಟಡ, ಮುದ್ದೇನಹಳ್ಳಿಯ ಬೆಳಗಾವಿ ವಿಟಿಯು ಇಲ್ಲವೇ ಇತರ ಖಾಸಗಿ ಕಟ್ಟಡವನ್ನು ಬಳಸಿಕೊಳ್ಳಲು ಚಿಂತಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

2019ನೇ ಸಾಲಿನಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಿದ್ದು, 650 ಕೋಟಿ ರೂ.ವೆಚ್ಚದಲ್ಲಿ ತಾಲೂಕಿನ ಅರೂರು ಬಳಿ ಇರುವ 60 ಎಕರೆ ಪ್ರದೇಶದಲ್ಲಿ ಬೃಹತ್ ಕಟ್ಟಡ ನಿರ್ಮಿಸಲಾಗುತ್ತಿದೆ. ಪ್ರಸ್ತುತ ಕಾಮಗಾರಿ ಶೇ.60 ಮುಗಿದಿದ್ದು ಮುಂದಿನ ಶೈಕ್ಷಣಿಕ ವರ್ಷದೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು 700 ಹಾಸಿಗೆಗೆಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಯೋಜನೆಯು ತ್ವರಿತಗತಿಯಲ್ಲಿ ಸಾಕಾರಗೊಳ್ಳಲಿದೆ. ಸ್ಥಳೀಯವಾಗಿ ಗುಣಮಟ್ಟದ ಆರೋಗ್ಯ ಸೇವೆ ಮತ್ತಷ್ಟು ಸುಧಾರಣೆ ಕಾಣಲಿದೆ. ಪ್ರಸ್ತುತ ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡದಲ್ಲಿ ವೈದ್ಯಕೀಯ ಕಾಲೇಜು ಕಾರ್ಯ ನಿರ್ವಹಿಸುವಂತಾಗಲು ಕ್ರಮ ಕೈಗೊಳ್ಳಲಾಗುವುದು. ಡಾ. ಕೆ.ಸುಧಾಕರ್, ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ