ಗದಗ: ಬಡಮಹಿಳೆ ಮತ್ತು ಮಕ್ಕಳಿಗೆ ವೈದ್ಯಕೀಯ ಸೇವೆ ತ್ವರಿತ ಗತಿಯಲ್ಲಿ ದೊರಕಬೇಕು. ಯಾರೂ ಚಿಕಿತ್ಸೆಯಿಂದ ವಂಚಿತರಾಗಬಾರದು ಎಂದು ಕಾನೂನು ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ನಗರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆಯಲ್ಲಿ ಭಾನುವಾರ ಏರ್ಪಡಿಸಿದ್ದ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ರೋಗಿಗಳಿಗೆ ಮೂಲಸೌಲಭ್ಯದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಆಸ್ಪತ್ರೆ ಒಳಗಡೆ ಹಾಗೂ ಹೊರಗಡೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ರೋಗಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಚಿಕಿತ್ಸೆ ನೀಡಬೇಕು ಎಂದು ನಿರ್ದೇಶನ ನೀಡಿದರು.
ಆಸ್ಪತ್ರೆಯಲ್ಲಿನ ರೋಗಿ ಹಾಗೂ ಅವರ ಸಂಬಂಧಿಕರೊಂದಿಗೆ ಮಾತನಾಡಿ ಕುಂದುಕೊರತೆ ಆಲಿಸಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಸವನಗೌಡ ಕರಿಗೌಡರ ಮಾತನಾಡಿ, ಪ್ರತಿದಿನ 80 ರಿಂದ 100 ಹೊರರೋಗಿಗಳು, ಬಾಣಂತಿಯರು ಹಾಗೂ ಸ್ತ್ರೀರೋಗಿಗಳು ಚಿಕಿತ್ಸೆ ಪಡೆಯುತ್ತಾರೆ. ಒಂದು ವರ್ಷದಲ್ಲಿ ಒಟ್ಟು 500 ರಿಂದ 600ವರೆಗೆ ಹೆರಿಗೆ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಸಹಜ ಹೆರಿಗೆ ಆಗದ ಗರ್ಭಿಣಿಯರನ್ನು ಗದಗ ಕೇಂದ್ರ ಸ್ಥಾನದಲ್ಲಿರುವ ಮಾನ್ವಿ ದುಂಡಪ್ಪ ಮಹಿಳಾ ಮತ್ತು ಮಕ್ಕಳ ಹೆರಿಗೆ ಆಸ್ಪತ್ರೆಗೆ ಕಳುಹಿಸಲಾಗುತ್ತದೆ ಎಂದು ಸಭೆಯ ಗಮನಕ್ಕೆ ತಂದರು.
ಜಿಲ್ಲಾಸ್ಪತ್ರೆಯ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ ಅವರು ಆಸ್ಪತ್ರೆಗಳಲ್ಲಿನ ಕುಂದುಕೊರತೆಗಳ ನಿವಾರಣೆಗೆ ಕ್ರಮ ವಹಿಸಲಾಗುವುದು ಎಂದರು.
ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್‌ಸಾಬ ಬಬರ್ಜಿ, ಜಿಪಂ ಸಿಇಒ ಭರತ್ ಎಸ್., ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಕೆ.ಆರ್., ಇತರರು ಉಪಸ್ಥಿತರಿದ್ದರು.