ಸೋಮವಾರಪೇಟೆ ತಾಲ್ಲೂಕು ಕಚೇರಿಯಲ್ಲಿ ತಹಸೀಲ್ದಾರ್ ಕೃಷ್ಣಮೂರ್ತಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯೋತ್ಸವ ಪೂರ್ವಭಾವಿ ಸಭೆ ನಡೆಯಿತು. ವಿವಿಧ ಇಲಾಖಾಧಿಕಾರಿಗಳು ಇದ್ದರು. 
ಜಿಲ್ಲೆ

ಅರ್ಥಪೂರ್ಣವಾಗಿ ರಾಜ್ಯೋತ್ಸವ ಆಚರಿಸಲು ತೀರ್ಮಾನ

ನಾಗೇಶ ಎಸ್

ಸೋಮವಾರಪೇಟೆ: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ನ.1ರಂದು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ 9.30 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಗ್ಗೆ 8.30ಕ್ಕೆ ಪಟ್ಟಣದ ಜೇಸಿ ವೇದಿಕೆಯಿಂದ ವಿವಿಧ ಶಾಲಾ ಕಾಲೇಜುಗಳ ಸ್ತಬ್ಧಚಿತ್ರಗಳೊಂದಿಗೆ ಶಾಲಾ ಮೈದಾನದವರೆಗೆ ಮೆರವಣಿಗೆ ನಡೆಯಲಿದೆ ಎಂದು ತಹಸೀಲ್ದಾರ್ ತಿಳಿಸಿದರು.

ಶಾಲೆಗಳ ಉಸ್ತುವಾರಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವಹಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದ ಅವರು, ಪಟ್ಟಣದ ಎಲ್ಲ ಪ್ರತಿಮೆಗಳನ್ನು ಸ್ವಚ್ಛಗೊಳಿಸಬೇಕೆಂದು ಪಟ್ಟಣ ಪಂಚಾಯಿತಿ ಅಧಿಕಾರಿಗೆ ಸೂಚಿಸಿದರು. ಪ್ರಥಮವಾಗಿ ರಾಷ್ಟ್ರ ಧ್ವಜಾರೋಹಣ, ನಂತರ ಕನ್ನಡ ಧ್ವಜಾರೋಹಣ ನೆರವೇರಲಿದ್ದು, ಧ್ವಜಗಳು ಅಚ್ಚುಕಟ್ಟಾಗಿ ಇರುವಂತೆ ನೋಡಿಕೊಳ್ಳಬೇಕೆಂದು ಅಗ್ನಿಶಾಮಕ ಸಿಬ್ಬಂದಿ ಲಕ್ಷ್ಮೀಕುಮಾರ್ ಅವರಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಸಾಹಿತಿ, ಬರಹಗಾರರು, ಸಂಶೋಧಕರು, ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಸನ್ಮಾನಿಸಲು ತೀರ್ಮಾನಿಸಲಾಯಿತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ನಿರ್ಧರಿಸಲಾಯಿತು. ಸಭೆಯಲ್ಲಿ ವಿವಿಧ ಇಲಾಖಾ ಅಧಿಕಾರಿಗಳು, ಶಾಲಾ ಕಾಲೇಜು ಮುಖ್ಯಸ್ಥರು ಭಾಗವಹಿಸಿದ್ದರು.