ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಗ್ರಾಮಾಂತರ ಜಿಲ್ಲೆಯ ನಾಲ್ಕೂ ತಾಲೂಕು ವ್ಯಾಪ್ತಿಯಲ್ಲಿ ನ.3ರಿಂದ 11ರವರೆಗೆ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮಾಂತರ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸೈಯಿಷಾ ಆಯಿಷಾ ತಿಳಿಸಿದರು.
ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 2025-26 ನೇ ಸಾಲಿನ ಕುಷ್ಠ ರೋಗ ಪತ್ತೆ ಹಚ್ಚುವ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು, ಜಿಲ್ಲಾದ್ಯಂತ ಹಮ್ಮಿಕೊಂಡಿರುವ ಅಭಿಯಾನ ಯಶಸ್ವಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ನಿರಂತರ ಕಾರ್ಯಪ್ರವೃತ್ತರಾಗಿರಬೇಕು: ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಎಡಿಸಿ ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣಾರೆಡ್ಡಿ ಅವರಿಗೆ ಹೇಳಿದರು. ಆರೋಗ್ಯ ಇಲಾಖೆ ಜತೆಗೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಾ ಸಂಸ್ಥೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಎಲ್ಲ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆಯಿಂದ ಅಭಿಯಾನ ಯಶಸ್ವಿಗೊಳಿಸಿದರೆ ಕುಷ್ಠರೋಗ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ 20 ಸಕ್ರಿಯ ಪ್ರಕರಣಗಳು: ಕುಷ್ಠರೋಗ ಹೊಂದಿರುವ ಮತ್ತು ಕುಷ್ಠರೋಗದಿಂದ ಅಂಗವಿಕಲತೆಗೆ ಬಾಧಿತರಾದವರು ಸೇರಿ ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು 20 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದು ಎಡಿಸಿ ಸೈಯಿಷಾ ಆಯೇಷಾ ತಿಳಿಸಿದರು. ಕುಷ್ಠರೋಗವು ಮೈಕೊಬ್ಯಾಕ್ಟಿರಿಯಂ ಲೆಪ್ರೆ ಎಂಬ ರೋಗಾಣುವಿನಿಂದ ಉಂಟಾಗುವ ಸಾಂಕ್ರಾಮಿಕ ರೋಗವಾಗಿದ್ದು, ಇದು ಮುಂದೆ ನರಗಳ ಹಾಗೂ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಆರಂಭದಲ್ಲಿ ಚರ್ಮದ ಮೇಲೆ ಮಚ್ಚೆಗಳು ಉಲ್ಬಣವಾಗುತ್ತದೆ ನಂತರದಲ್ಲಿ ಚರ್ಮದ ಬಣ್ಣ ತಿಳಿ ಬಿಳಿ ಅಥವಾ ತಾಮ್ರ ಬಣ್ಣಕ್ಕೆ ತಿರುಗುವುದು ಇತ್ಯಾದಿ ಲಕ್ಷಣಗಳು ಕಂಡುಬರುತ್ತವೆ ಇಂಥ ಯಾವುದಾದರೂ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು ಎಂದು ಸಲಹೆ ನೀಡಿದರು. ಕುಷ್ಠರೋಗ ನಿರ್ಮೂಲನಾ ಅಭಿಯಾನದಲ್ಲಿ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಜಿಲ್ಲಾ ಆರೋಗ್ಯ ಇಲಾಖೆ ಸಹಕಾರದೊಂದಿಗೆ ಕರ್ತವ್ಯ ನಿರ್ವಹಿಸಬೇಕು. ಕುಷ್ಠರೋಗದ ಲಕ್ಷಣಗಳು ಕಂಡುಬಂದ ವ್ಯಕ್ತಿಗಳಿಗೆ ತಕ್ಷಣ ತಪಾಸಣೆ ಜತೆಗೆ ಚಿಕಿತ್ಸೆ ದೊರಕಿಸಿಕೊಡುವ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.
ಅಭಿಯಾನಕ್ಕೆ ಪೂರ್ವಸಿದ್ದತೆ: 2025-26 ನೇ ಸಾಲಿನ ಕುಷ್ಠ ರೋಗ ಪತ್ತೆ ಹಚ್ಚುವ ಅಭಿಯಾನದಡಿ ಈಗಾಗಲೇ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಅಭಿಯಾನ ನಡೆಸುವ ರೂಪುರೇಷೆ ಸಿದ್ದಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾಕೃಷ್ಣಾರೆಡ್ಡಿ ಸಭೆಗೆ ಮಾಹಿತಿ ನೀಡಿದರು. ಆರೋಗ್ಯ ಇಲಾಖೆ ಜತೆಗೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಾ ಸಂಸ್ಥೆಗಳ ಸಹಕಾರ ಪಡೆಯಲಾಗುವುದು, ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಕುಷ್ಠರೋಗದ ಲಕ್ಷಣಗಳೇನು? ರೋಗ ಲಕ್ಷಣ ಕಂಡುಬಂದರೆ ಅನುಸರಿಸಬೇಕಾದ ಕ್ರಮವೇನು ಹಾಗೂ ಚಿಕಿತ್ಸೆ ಲಭ್ಯತೆ ಕುರಿತು ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.