ಉಡುಪಿ: ಯುವಜನರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಉದ್ದೇಶದಿಂದ ಉಡುಪಿ ನಗರದಲ್ಲಿ ಬೃಹತ್ ಕೌಶಲ್ಯ ರೋಜ್ಗಾರ್ ಮೇಳವು ಫೆಬ್ರವರಿ ಮೊದಲ ವಾರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕೌಶಲ್ಯ ರೋಜ್ಗಾರ್ ಮೇಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯುವಜನರಿಗೆ ಉದ್ಯೋಗವನ್ನು ಒದಗಿಸುವ ಬೃಹತ್ ಉದ್ಯೋಗ ಮೇಳವು ಫೆಬ್ರವರಿ ಮೊದಲನೇ ವಾರದಲ್ಲಿ ನಗರದ ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಈ ಮೇಳದಲ್ಲಿ ರಾಜ್ಯದ ಹಾಗೂ ಜಿಲ್ಲೆಯ ವಿವಿಧ ಪ್ರತಿಷ್ಠಿತ ಕಂಪನಿಗಳ 100 ಕ್ಕೂ ಹೆಚ್ಚು ಉದ್ಯೋಗದಾತರು ಭಾಗವಹಿಸಲಿದ್ದು, 3500 ಕ್ಕೂ ಹೆಚ್ಚು ಉದ್ಯೋಗ ಆಕಾಂಗಳು ಮೇಳಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದರು.
ಜಿಲ್ಲೆಯಲ್ಲಿ ನಡೆಯಲಿರುವ ಉದ್ಯೋಗ ಮೇಳದ ಬಗ್ಗೆ ಶಾಲಾ -ಕಾಲೇಜುಗಳಲ್ಲಿ ಹಾಗೂ ವೃತ್ತಿಪರ ವಿದ್ಯಾಸಂಸ್ಥೆಗಳಲ್ಲಿ ಹೆಚ್ಚಿನ ಪ್ರಚಾರ ನೀಡಬೇಕು. ಹಳೆ ವಿದ್ಯಾರ್ಥಿಗಳಿಗೂ ಸಹ ಉದ್ಯೋಗ ಮೇಳದ ಬಗ್ಗೆ ಮಾಹಿತಿ ನೀಡಬೇಕು. ಭಾಗವಹಿಸುವವರಿಗೆ ಊಟೋಪಚಾರ ಸೇರಿದಂತೆ ಎಲ್ಲ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಶೀಘ್ರದಲ್ಲಿ ನೋಂದಣಿಗೆ ವೆಬ್ಸೈಟ್ ರಚಿಸಬೇಕು ಎಂದರು.
ಜಿಪಂ ಯೋಜನ ನಿರ್ದೇಶಕ ಶ್ರೀನಿವಾಸ್ ರಾವ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ವಿ. ನಾಯಕ್, ಡಿಡಿಪಿಯು ಮಾರುತಿ, ಕೈಗಾರಿಕಾ ಉದ್ದಿಮೆಗಳ ಸಂಘದ ಅಧ್ಯಕ್ಷ ಹರೀಶ್ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.