ಜಿಲ್ಲೆ

ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳಬೇಡಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

ಮಂಡ್ಯ: ಸಾರ್ವಜನಿಕರು ವಿವಿಧ ಇಲಾಖೆಗೆ ಸಂಬಂಧಿಸಿದ ಮಾಹಿತಿಗಳನ್ನು ಕೋರಿ ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿರುವ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳದೆ ಶೀಘ್ರವೇ ವಿಲೇವಾರಿ ಮಾಡಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಮಟ್ಟದ ಅಧಿಕಾರಿಗಳು ಆಫ್‌ಲೈನ್ ಮತ್ತು ಆನ್‌ಲೈನ್ ಮೂಲಕ ಮಾಹಿತಿ ಹಕ್ಕು ಕಾಯ್ದೆಯಡಿ 2024-25 ಮತ್ತು 2025-26 ನೇ ಸಾಲಿನ ಏಪ್ರಿಲ್ ಮಾಹೆಯವರೆಗೂ ಸ್ವೀಕರಿಸಿ ವಿಲೇವಾರಿ ಮಾಡಿದ ಹಾಗೂ ಬಾಕಿ ಇರುವ ಅರ್ಜಿಗಳ ಮಾಹಿತಿಯನ್ನು ನೀಡಬೇಕು. ಅದೇ ರೀತಿ ಮಾಹಿತಿ ಹಕ್ಕು ಕಾಯ್ದೆಯಡಿ ಮೇಲ್ಮನವಿ ಸಲ್ಲಿಕೆಯಾಗಿರುವ ಅರ್ಜಿ ಕುರಿತು ಮಾಹಿತಿ ನೀಡಬೇಕು. ಮಾಹಿತಿ ಹಕ್ಕು ಕಾಯ್ದೆಯಡಿ ಯಾವುದೇ ಗೊಂದಲದ ಅಂಶಗಳು ಇದ್ದಲ್ಲಿ ಅದನ್ನು ಪಟ್ಟಿ ಮಾಡಿ ಆಯುಕ್ತರ ಗಮನಕ್ಕೆ ತನ್ನಿ ಎಂದರು.

ಜಿಲ್ಲೆಯಲ್ಲಿ ಸಕಾಲ ಅರ್ಜಿಗಳು ಸರಿಯಾಗಿ ವಿಲೇವಾರಿ ಆಗದಿರುವುದು ಗಮನಕ್ಕೆ ಬಂದಿದೆ. ಅಧಿಕಾರಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಸಕಾಲ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಸಕಾಲ ಅರ್ಜಿಗಳು ನಿಗದಿತ ಸಮಯದಲ್ಲಿ ವಿಲೇವಾರಿ ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ದಂಡ ವಿಧಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎಂ.ಬಾಬು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಮೇಗೌಡ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪುಷ್ಪಾ, ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಪುಷ್ಪಾ, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ ಇತರರಿದ್ದರು.