ವಿಜಯಪುರದ ಜಿ.ಪಂ. ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಸ್.ಆರ್. ಪಾಟೀಲ ಮಾತನಾಡಿದರು. ಜಿ.ಪಂ. ಸಿಇಒ ರಿಷಿ ಆನಂದ, ಇಲಿಯಾಸ್ ಅಹ್ಮದ ಬೋರಾಮಣಿ, ನಿಂಗಪ್ಪ ಗೋಠೆ ಮತ್ತಿತರರಿದ್ದಾರೆ. 
ಜಿಲ್ಲೆ

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ

ವಿಜಯಪುರ: ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯು ಜಿ.ಪಂ. ಸಭಾಂಗಣದಲ್ಲಿ ನಡೆಯಿತು.

ಎಸ್.ಆರ್. ಪಾಟೀಲ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಅದರ ಹಿನ್ನೆಲೆ, ಧ್ಯೇಯ ಉದ್ದೇಶಗಳನ್ನು ಸದಸ್ಯರಿಗೆ ವಿವರಿಸಿದರು. ಅಲ್ಲದೆ, ಜಿಲ್ಲಾ ಮಟ್ಟದ ಅಧಿಕಾರಿಗಳಿಂದ 5 ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಿದರು.

ಶಕ್ತಿ ಯೋಜನೆ : ಜಿಲ್ಲೆಯಲ್ಲಿ ಶಕ್ತಿ ಯೋಜನೆಯನ್ನು ಸಮರ್ಪಕವಾಗಿ 77 ಅನುಸೂಚಿಗಳು 616 ಟ್ರಿಪ್‌ಗಳಲ್ಲಿ ಜಿಲ್ಲೆಯಲ್ಲಿ ಉತ್ತಮ ಸೇವೆ ನೀಡಲಾಗುತ್ತಿದೆ. ಯೋಜನೆ ಪ್ರಾರಂಭದಿಂದ ಸದ್ಯದವರೆಗೆ ಒಟ್ಟು 10.39 ಕೋಟಿ ಜನರು ಪ್ರಯಾಣಿಸಿದ್ದು 318.40 ಕೋಟಿ ರೂಗಳು ವೆಚ್ಚವಾಗಿದೆ. ಇನ್ನೂ ಇದೇ ವೇಳೆ ಜಿಲ್ಲೆಯಲ್ಲಿ ಹೆಚ್ಚಿನ ಸೇವೆ ನೀಡಲು ಬಸ್‌ಗಳ ಅವಶ್ಯಕತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲು, ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಮಾರ್ಗಗಳನ್ನು ಹೊಂದಿಣಿಕೆ ಮಾಡಲು ಹಾಗೂ ಮಹಿಳೆಯರಿಗೆ ಯೋಜನೆಯ ಬಗ್ಗೆ ತಿಳಿವಳಿಕೆ ನೀಡಲು ಎಸ್.ಆರ್. ಪಾಟೀಲ ಸೂಚಿಸಿದರು.

ಗೃಹ ಜ್ಯೋತಿ : ಜಿಲ್ಲೆಯಲ್ಲಿ ಒಟ್ಟು 439316 ಫಲಾನುಭವಿಗಳಿಗೆ ಗೃಹ ಜ್ಯೋತಿ ಯೋಜನೆಯಡಿ 200 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಯೋಜನೆ ಪ್ರಾರಂಭದಿಂದ ಸದ್ಯದವರೆಗೆ 302.96 ಕೋಟಿ ರೂಗಳ ಅನುದಾನ ಖರ್ಚಾಗಿದೆ ಎಂದು ಅಧಿಕಾರಿಗಳು ಸಭೆಗೆ ವಿವರಿಸಿದರು. ಅಲ್ಲದೆ, ಸೋಲಾರ ಬಳಕೆ ಕುರಿತು ಸಾರ್ವಜನಿಕರಲ್ಲಿ ತಿಳಿವಳಿಕೆ ಮೂಡಿಸಲು ವ್ಯಾಪಕ ಪ್ರಚಾರ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಎಸ್.ಆರ್. ಪಾಟೀಲ ಸೂಚಿಸಿದರು.

ಅನ್ನ ಭಾಗ್ಯ ಯೋಜನೆ : ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು 888 ನ್ಯಾಯ ಬೆಲೆ ಅಂಗಡಿಗಳಿದ್ದು ಒಟ್ಟು 509872 ಪಡಿತರ ಚೀಟಿಗಳು ಚಾಲ್ತಿಯಲ್ಲಿವೆ. ಅನ್ಯಭಾಗ್ಯ ಯೋಜನೆಯಡಿ ಬಿಪಿಎಲ್ ಕುಟುಂಬಗಳ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿಯ ಬದಲಾಗಿ 170 ರೂಗಳನ್ನು ಡಿಬಿಟಿ ಮೂಲಕ ಜಮೆ ಮಾಡಲಾಗುತ್ತಿದೆ. ಈ ಯೋಜನೆ ಪ್ರಾರಂಭದಿಂದ ಸದ್ಯದವರೆಗೆ ಒಟ್ಟು 348.89 ಕೋಟಿ ರೂಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಗ್ರಾಮಗಳಲ್ಲಿ ಪಡಿತರ ವಿತರಿಸುವ ಸಮಯವನ್ನು ಸಮೂಹ ಮಾಧ್ಯಮಗಳ ಮೂಲಕ ಪ್ರಚಾರ ನೀಡಬೇಕು. ಆಹಾರ ಧಾನ್ಯ ವಿತರಿಸುವಾಗ ತೂಕದ ಬಗ್ಗೆ ಪಾರದರ್ಶಕತೆ ಕಾಯ್ದುಕೊಳ್ಳಲು ಸಂಬಂಧಿಸಿದ ಎಲ್ಲ ನ್ಯಾಯಬೆಲೆ ಅಂಗಡಿಕಾರರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲು ತಿಳಿಸಿದರು.

ಗೃಹ ಲಕ್ಷ್ಮೀ : ಯೋಜನೆಯಲ್ಲಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳ 2000 ಸಾವಿರ ರೂಗಳಂತೆ ಡಿಬಿಟಿ ಮೂಲಕ ಅವರ ಖಾತೆಗೆ ಜಮೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 491648 ಫಲಾನುಭವಿಗಳಿಗೆ ಯೋಜನೆಯ ಪ್ರಾರಂಭದಿಂದ ಸದ್ಯದವರೆಗೆ 1391.64 ಕೋಟಿ ರೂಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ 2000 ರೂಗಳನ್ನು ಜಮೆ ಮಾಡಲು ಜಿಎಸ್‌ಟಿ ಸಮಸ್ಯೆಯಿಂದ ಜಮೆ ಅಗುತ್ತಿಲ್ಲ. ಇದು ಸರ್ಕಾರ ಮಟ್ಟದ ಸಮಸ್ಯೆಯಾಗಿದ್ದು, ಇದನ್ನು ಸರಿಪಡಿಸಲು ಸರ್ಕಾರದ ಹಂತದಲ್ಲಿ ಹಂತಹಂತವಾಗಿ ಕ್ರಮ ಕೈಕೊಳ್ಳಲಾಗುತ್ತಿದೆ ಎಂದು ಎಸ್.ಆರ್. ಪಾಟೀಲ ತಿಳಿಸಿದರು.

ಯುವ ನಿಧಿ : ಯೋಜನೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 9733 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಯೋಜನೆ ಪ್ರಾರಂಭದಿಂದ ಸದ್ಯದವರೆಗೆ ಒಟ್ಟು 10.50 ಕೋಟಿ ರೂಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಸರ್ಕಾರದ ನಿರ್ದೇಶನದ ಪ್ರಕಾರ ಈಗಾಗಲೇ, ವಿದ್ಯಾರ್ಥಿಗಳ ನೋಂದಣಿಗಾಗಿ ಅಭಿಯಾನ ಕೈಕೊಂಡು ನೋಂದಣಿ ಮಾಡಲಾಗುತ್ತಿದೆ. ಕಾಲೇಜು ಮತ್ತು ವಿವಿಗಳಲ್ಲಿ ಈ ಯೋಜನೆ ಕುರಿತು ಪ್ರಚಾರ ಕಾರ್ಯಕ್ರಮ ಕೈಕೊಳ್ಳಲು ತಿಳಿಸಿದರು. ಅಲ್ಲದೆ, ಅದಕ್ಕೆ ಸಂಬಂಧಿಸಿದ ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರಚುರ ಪಡಿಸಲು ಸೂಚನೆ ನೀಡಿದರು.

ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಸಮಿತಿಯ ಎಲ್ಲ ಸದಸ್ಯರು ತಮ್ಮ ಹಂತದಲ್ಲಿ ವ್ಯಾಪಕವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಈ ಯೋಜನೆಗಳ ಅನುಷ್ಠಾದಿಂದ ಸಾರ್ವಜನಿಕರಿಗೆ ಅನುಕೂಲವಾದ ಬಗ್ಗೆ ಯಶೋಗಾಥೆಗಳ ಮೂಲಕ ಸರ್ಕಾರದ ಗಮನ ಸೆಳೆಯಲು ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಇಲಿಯಾಸ್ ಅಹ್ಮದ ಬೋರಾಮಣಿ ಬಿನ್ ಮಹಿಬೂಬಸಾಬ ಬೋರಾಮಣಿ ಮಾತನಾಡಿ, ರಾಜ್ಯ ಮಟ್ಟದ ವಿಷಯಗಳ ಬಗ್ಗೆ ಈ ಸಭೆಯಲ್ಲಿ ಪ್ರಸ್ತಾಪಿಸುವುದು ಸೂಕ್ತ. ತಾಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ವಿಷಯಗಳನ್ನು ನಮ್ಮ ಹಂತದಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸದಸ್ಯರಿಗೆ ಸಲಹೆ ನೀಡಿದರು.

ಜಿ.ಪಂ. ಸಿಇಒ ರಿಷಿ ಆನಂದ, ಶಕ್ತಿ ಯೋಜನೆಗೆ ಹಾಗೂ ಅನ್ನಭಾಗ್ಯ ಯೋಜನೆಗೆ ಕುರಿತು ಸದಸ್ಯರು ಗಮನಿಸಿದ ವಿಷಯಗಳಿಗೆ ಸಂಬಂಧಸಿದಂತೆ ಕೂಡಲೇ ಅಗತ್ಯ ಕ್ರಮ ವಹಿಸಿ ವರದಿ ಸಲ್ಲಿಸಲು ಸಂಬಂಧಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯ ಪ್ರಾರಂಭಕ್ಕೂ ಮುನ್ನ ಯುವ ನಿಧಿ ಯೋಜನೆಯ ಪೋಸ್ಟರ್ ಹಾಗೂ ಬ್ಯಾನರ್‌ಗಳನ್ನು ಬಿಡುಗಡೆಗೊಳಿಸಲಾಯಿತು.

ಜಿ.ಪಂ. ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸದ್ದಾಂ ಕುಂಟೋಜಿ, ಹೊನ್ನಮಲ್ಲ ಸಾರವಾಡ, ಶ್ರೀಶೈಲ ಕವಲಗಿ, ವಿವಿಧ ತಾಲೂಕುಗಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಮತ್ತಿತರರಿದ್ದರು.