ಜಿಲ್ಲೆ

ಜಿಲ್ಲೆಯಲ್ಲಿರುವ ನಕಲಿ ವೈದ್ಯರನ್ನು ಪತ್ತೆ ಮಾಡಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

ಮಂಡ್ಯ: ಜಿಲ್ಲೆಯಲ್ಲಿ ನಕಲಿ ವೈದ್ಯರನ್ನು ಪತ್ತೆ ಮಾಡಲು ಕೆಲಸ ನಿರಂತರವಾಗಿ ನಡೆಯಬೇಕು. ಇದಕ್ಕೆ ಸ್ಥಳೀಯ ವೈದ್ಯಾಧಿಕಾರಿ ಹಾಗೂ ಆಶಾ ಕಾರ್ಯಕರ್ತೆಯರ ಸಹಕಾರ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಲೋಪತಿ ಮತ್ತು ಹೋಮಿಯೋಪತಿ, ಆಯುಷ್ ಚಿಕಿತ್ಸೆ ನೀಡಲು ಪರವಾನಗಿ ಪಡೆದಿರುವ ವೈದ್ಯರು, ಅದೇ ರೀತಿಯ ಚಿಕಿತ್ಸೆ ನೀಡಬೇಕು. ಇವುಗಳನ್ನು ಸಮಿತಿ ಭೇಟಿ ನೀಡಿದಾಗ ಪರಿಶೀಲಿಸಿ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಬೇಕು. ಅಂತೆಯೇ ಸ್ಕಾೃನಿಂಗ್ ಸೆಂಟರ್, ಕ್ಲಿನಿಕ್ ಹಾಗೂ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಬೇಕು. ಈ ಪ್ರಕ್ರಿಯೆ ನಿರಂತರವಾಗಿ ನಡೆಯಬೇಕು ಎಂದರು.

ಹೆರಿಗೆಯ ಸಂದರ್ಭದಲ್ಲಿ ತಾಯಿಯ ಮರಣದ ಪ್ರಮಾಣ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹೆರಿಗೆಯ ಸಂದರ್ಭದಲ್ಲಿ ತಾಯಿಯ ಮರಣ ತಡೆಗಟ್ಟಲು ವೈದ್ಯರು ಸಕಲ ಪ್ರಯತ್ನ ನಡೆಸಬೇಕು. ಸಾಮಾನ್ಯವಾಗಿ ಹೆರಿಗೆಯ ಸಂದರ್ಭದಲ್ಲಿ ಉಂಟಾಗುವ ಅನಿಮೀಯಾ, ರಕ್ತದೊತ್ತಡ ಸೇರಿದಂತೆ ಇನ್ನಿತರ ತೊಂದರೆಗಳ ಬಗ್ಗೆ ಯಾವ ರೀತಿ ಎಚ್ಚರಿಕೆ ವಹಿಸಬೇಕು ಎಂಬುದರ ಬಗ್ಗೆ ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರು ಅರಿವು ಮೂಡಿಸಬೇಕು. ವೈದ್ಯರು ನೀಡುವ ಸಲಹೆ ಹಾಗೂ ಸೂಚನೆಗಳನ್ನು ಗರ್ಭೀಣಿಯರು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಮನವಿ ಮಾಡಿದರು.

ಹೃದಯ ವೈಶಾಲ್ಯ ಯೋಜನೆಯಡಿ 35 ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇ.ಸಿ.ಜಿ ಯಂತ್ರ ಒದಗಿಸಲಾಗಿದೆ. ಡಿಸೆಂಬರ್ ಅಂತ್ಯದವರೆಗೆ 1,405 ವ್ಯಕ್ತಿಗಳನ್ನು ತಪಾಸಣೆಗೆ ಒಳಪಡಿಸಿದ್ದು, ಅವರಲ್ಲಿ 274 ಜನರಿಗೆ ಹೃದಯಕ್ಕೆ ಸಂಬಂಧಿಸಿದ ಖಾಯಿಲೆ ಪತ್ತೆಯಾಗಿದೆ. ಅವರಿಗೆ ಹೆಚ್ಚಿನ ಚಿಕಿತ್ಸೆ ಪಡೆಯಲು ತಿಳಿಸಲಾಗಿದೆ. ಈ ಯೋಜನೆಯಡಿ ಕೆಲ ಕೇಂದ್ರದ ಕೆಲಸ ತೃಪ್ತಿಕರವಾಗಿಲ್ಲ. ಆದ್ದರಿಂದ ತಾಲೂಕು ವೈದ್ಯಾಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಕೇಂದ್ರದಲ್ಲಿ ಹೆಚ್ಚಿನ ತಪಾಸಣೆ ನಡೆಸಿ ಯಂತ್ರವನ್ನು ಸದುಪಯೋಗ ಪಡಿಸಿಕೊಂಡರೆ ಮುಂದಿನ ದಿನಗಳಲ್ಲಿ ಉಳಿದಿರುವ ಕೇಂದ್ರಕ್ಕೂ ಇ.ಸಿ.ಜಿ ಯಂತ್ರ ಒದಗಿಸಲು ಸಾಧ್ಯ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಸಿ.ಬೆಟ್ಟಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್, ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್ಕುಮಾರ್, ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಸೋಮಶೇಖರ್, ಜಿಲ್ಲಾ ವಾರ್ತಾಧಿಕಾರಿ ಎಚ್.ಎಸ್.ನಿರ್ಮಲಾ ಇತರರಿದ್ದರು.