ಜಿಲ್ಲೆ

ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ: ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ

ಮಂಡ್ಯ: ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ಬೇಡಿಕೆಗಿಂತ ಹೆಚ್ಚಿದೆ. ರೈತರಿಗೆ ಯಾವುದೇ ಆತಂಕ ಬೇಡ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. ಅತ್ತ ಕೆಆರ್‌ಎಸ್‌ನ ಒಳಹರಿವಿನ ಪ್ರಮಾಣವೂ ಹೆಚ್ಚಾಗಿದೆ. ಕೃಷಿ ಸಚಿವರು ಸಹ ಬೆಳೆಗಳಿಗೆ ನೀರು ಬಿಡುಗಡೆ ಮಾಡುವ ಬಗ್ಗೆ ತಿಳಿಸಿದ್ದಾರೆ. ಆದ್ದರಿಂದ ಕೃಷಿ ಇಲಾಖೆ ಅಧಿಕಾರಿಗಳು ಬಿತ್ತನೆ ಬೀಜ ವಿತರಣೆಗೆ ಸಜ್ಜಾಗಬೇಕು ಎಂದರು.

ರೈತರು ಕೃಷಿ ಚಟುವಟಿಕೆ ಪ್ರಾರಂಭ ಮಾಡುವುದರಿಂದ ರೈತ ಸಂಪರ್ಕ ಕೇಂದ್ರ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಬಿತ್ತನೆ ಬೀಜ ಮಾರಾಟ ಪ್ರಾರಂಭವಾಗಬೇಕು. ರೈತರಿಗೆ ಅನುಕೂಲವಾಗುವಂತೆ ಬೆಳಗ್ಗೆ 8 ಗಂಟೆಗೆ ಖರೀದಿ ಕೇಂದ್ರಗಳನ್ನು ತೆರೆಯಬೇಕು. ರೈತ ಸಂಪರ್ಕ ಕೇಂದ್ರ ಹಾಗೂ ಕೃಷಿ ಪತ್ತಿನ ಸಹಕಾರ ಸಂಘ, ರಸಗೊಬ್ಬರ ಮಾರಾಟ ಕೇಂದ್ರದಲ್ಲಿ ನೂಕು ನುಗ್ಗಲು ಉಂಟಾಗದಂತೆ ವ್ಯವಸ್ಥೆ ಮಾಡಿ. ದಾಸ್ತಾನು ಇರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ವಿವರವನ್ನು ಪ್ರಕಟಿಸಿ. ಇದರಿಂದ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಇಲ್ಲ ಎಂದು ಮನವರಿಕೆ ಆಗುತ್ತದೆ ಎಂದರು.

ತಹಸೀಲ್ದಾರ್ ಹಾಗೂ ಕೃಷಿ ಸಹಾಯಕ ನಿರ್ದೇಶಕರು ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಿ. ಪ್ರತಿದಿನ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ. ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ರೈತರಿಗೆ ಅಗತ್ಯ ಮಾಹಿತಿಗಳನ್ನು ಒದಗಿಸಿ ಸೌಹಾರ್ದತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದ ಡಿಸಿ, ಬಿತ್ತನೆ ಬೀಜಗಳ ಮೊಳಕೆ ಹೊಡೆಯುವ ಪರೀಕ್ಷೆಗಳನ್ನು ಕಡ್ಡಾಯವಾಗಿ ಇಲಾಖೆ ನೀಡಿರುವ ಸೂಚನೆಗಳಂತೆ ಅಧಿಕಾರಿಗಳು ನಡೆಸಬೇಕು. 2024-25ನೇ ಸಾಲಿನ ಪೂರ್ವ ಮುಂಗಾರಿಗೆ ಸಂಬಂಧಿಸಿದಂತೆ 14,60,913 ತಾಕುಗಳ ಬೆಳೆ ಸಮೀಕ್ಷೆ ನಡೆಸಬೇಕಿದೆ. ಈ ಪೈಕಿ 6,87,535 ತಾಕುಗಳ ಬೆಳೆ ಸಮೀಕ್ಷೆ ನಡೆಸಿ ಶೇ.47.06ರಷ್ಟು ಸಾಧನೆಯಾಗಿದೆ. ಬೆಳೆ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಿ ಒಂದು ವಾರದೊಳಗೆ ಶೇ.100 ರಷ್ಡು ಸಾಧನೆಯಾಗಬೇಕು ಎಂದು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾತನಾಡಿ, ಕೃಷಿ ಅಧಿಕಾರಿಗಳು ರೈತರಿಗೆ ಹಸಿರು, ಜೈವಿಕ ಹಾಗೂ ರಾಸಾಯನಿಕ ಗೊಬ್ಬರಗಳ ಬಳಕೆಯ ಉಪಯುಕ್ತತೆಯ ಬಗ್ಗೆ ಅರಿವು ಮೂಡಿಸಿ ಹೆಚ್ಚು ಬಳಸುವಂತೆ ಪ್ರೇರೇಪಿಸಬೇಕು ಎಂದರು.

ಜಂಟಿ ಕೃಷಿ ನಿರ್ದೇಶಕ ಅಶೋಕ್ ಮಾತನಾಡಿ, ಜಿಲ್ಲೆಯಲ್ಲಿ 9,996 ಕ್ವಿಂಟಾಲ್ ಭತ್ತದ ಬಿತ್ತನೆ ಬೀಜಕ್ಕೆ ಬೇಡಿಕೆ ಇದ್ದು, 10,764 ಕ್ವಿಂಟಾಲ್ ದಾಸ್ತಾನು ಇದೆ. ರಾಗಿ 985 ಕ್ವಿಂಟಾಲ್ ಬೇಡಿಕೆ ಇದ್ದು, 1,538 ಕ್ವಿಂಟಾಲ್ ದಾಸ್ತಾನು ಇದೆ. ವಿವಿಧ ರಸಗೊಬ್ಬರ ಒಟ್ಟು 54,844 ಮೆಟ್ರಿಕ್ ಟನ್ ರಸಗೊಬ್ಬರ ಸಂಗ್ರಹವಿದೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್, ಕೃಷಿ ಇಲಾಖೆ ಉಪನಿರ್ದೇಶಕಿಯರಾದ ಮಾಲತಿ, ಮಮತಾ ಇತರರಿದ್ದರು.