ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಕಾನ್ಫರೆನ್ಸ್
ಹೊಸಪೇಟೆ: ಬೆಳೆಹಾನಿ ಹಾಗೂ ಮನೆಹಾನಿಗೆ ಪರಿಹಾರ ನೀಡಲು ಅನುದಾನದ ಕೊರತೆ ಇಲ್ಲ. ಮೂಲಸೌಕರ್ಯ ಹಾನಿಗೆ ಬಿಡುಗಡೆ ಮಾಡಲಾದ ಅನುದಾನಕ್ಕೆ ಕ್ರಿಯಾಯೋಜನೆ ರೂಪಿಸಿ, ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಕಮಲಾಪುರದ ಆರೆಂಜ್ ಕೌಂಟಿ ಹೊಟೆಲ್ ನಲ್ಲಿ ತಂಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಬೆಳಗ್ಗೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ರಾಜ್ಯದಲ್ಲಿ ಮಳೆಯಿಂದ ಆಗಿರುವ ಹಾನಿ ಕುರಿತು ಅವಲೋಕಿಸಿದರು.
ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಮಳೆಯಾಗುತ್ತಿದೆ. ದಿಢೀರ್ ಪ್ರವಾಹ ಉಂಟಾಗುವ ಹೊಳೆ, ಹಳ್ಳಗಳ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಬೇಕು. ಪರಿಹಾರ ವಿತರಣೆ, ಮಾಹಿತಿ ದಾಖಲಿಸುವಲ್ಲಿ ಲೋಪಗಳಾಗದಂತೆ ತಹಸೀಲ್ದಾರರಿಗೆ ಮಾರ್ಗಸೂಚಿ ನೀಡಬೇಕು ಎಂದು ಮಾರ್ಗದರ್ಶನ ನೀಡಿದರು.
ಮನೆಗಳಿಗೆ ಹಾನಿ ದಾಖಲಿಸುವಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಬೇಕು. ವಸ್ತುಸ್ಥಿತಿ ಆಧರಿಸಿ, ಪರಿಹಾರ ಕೋರಿ ಬಂದ ಮನವಿಗಳನ್ನು ದಾಖಲಿಸಬೇಕು. ಮನೆ ಹಾನಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪರಿಹಾರ ವಿತರಣೆಗೆ ಸುತ್ತೋಲೆ ಹೊರಡಿಸುವಂತೆ ವಿಪತ್ತು ನಿರ್ವಹಣೆ ಆಯುಕ್ತರಿಗೆ ಸೂಚಿಸಿದರು.
ಬೆಳೆಹಾನಿ ಪರಿಹಾರ ವಿತರಣೆಯನ್ನು ತ್ವರಿತವಾಗಿ ವಿತರಿಸಬೇಕು. ಅಕ್ಟೋಬರ್ ತಿಂಗಳಿನಲ್ಲಿ ಸಂಭವಿಸಿದ ಬೆಳೆಹಾನಿಯನ್ನು ಸಹ ಕೂಡಲೇ ಜಂಟಿ ಸಮೀಕ್ಷೆ ನಡೆಸಿ, ಈ ತಿಂಗಳೊಳಗೆ ಪರಿಹಾರ ವಿತರಿಸಲು ಸೂಚನೆ ನೀಡಿದರು.
ಮೂಲಸೌಲಭ್ಯ ಹಾನಿಗೆ ಸಂಬಂಧಿಸಿದಂತೆ ಹಾನಿಯ ತೀವ್ರತೆಯನ್ನು ಆಧರಿಸಿ, ಸಿ ವರ್ಗ- ಎನ್ ಡಿಆರ್ ಎಫ್ ಮಾರ್ಗಸೂಚಿಯನ್ವಯ ದುರಸ್ತಿ, ಬಿ ವರ್ಗಕ್ಕೆ ಸರ್ಕಾರದಿಂದ ಹೆಚ್ಚುವರಿ ನೆರವು, ಎ ವರ್ಗದಲ್ಲಿ ಗುರುತಿಸಲಾದ ಹಾನಿಯಾದಲ್ಲಿ ಪುನರ್ ನಿರ್ಮಾಣ ಅಗತ್ಯವಿರುವ ಕಾಮಗಾರಿಗಳು ಎಂದು ಗುರುತಿಸಿ, ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್, ಜಿ.ಪಂ.ಸಿಇಒ ಹರ್ಷಲ್ ಬೋಯರ್ ನಾರಾಯಣರಾವ್,ಎಸ್ಪಿ ಡಾ.ಅರುಣ್ ಕೆ, ಸಹಾಯಕ ಆಯುಕ್ತ ಸಿದ್ರಾಮೇಶ್ವರ ಉಪಸ್ಥಿತರಿದ್ದರು.