ಜಿಲ್ಲೆ

ದತ್ತಾಂಶ ಸಂಗ್ರಹ ಸಮೀಕ್ಷೆ ಚುರುಕುಗೊಳಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಏಕಸದಸ್ಯ ಆಯೋಗದ ನಿರ್ದೇಶನದಂತೆ ದತ್ತಾಂಶ ಶೇಖರಿಸುವ ಸಮೀಕ್ಷೆಯು ಜಿಲ್ಲೆಯಲ್ಲಿ ಪ್ರಾರಂಭವಾಗಿದೆ. ಈವರೆಗೆ ಶೇ.26 ರಷ್ಟು ಮಾತ್ರ ಸಾಧನೆಯಾಗಿರುತ್ತದೆ. ಆದ್ದರಿಂದ ಸಮೀಕ್ಷೆ ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮುಖಂಡರೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ಮನೆಗಳಿಗೂ ಭೇಟಿ ನೀಡಿ ಸಮೀಕ್ಷೆ ನಡೆಸಬೇಕು. ಯಾವುದೇ ಕಾರಣಕ್ಕೂ ಪರಿಶಿಷ್ಟ ಜಾತಿ ಕುಟುಂಬದವರು ಜಾತಿ ಗಣತಿ ಸಮೀಕ್ಷೆಯಿಂದ ಯಾರೂ ವಂಚಿತರಾಗದಂತೆ ಸಮೀಕ್ಷೆ ನಡೆಸಿ ಎಂದರು.

2011ರ ಜನಗಣತಿಯ ಪ್ರಕಾರ ಜಿಲ್ಲೆಯಲ್ಲಿ 61,423 ಪರಿಶಿಷ್ಟ ಜಾತಿಯ ಮನೆಗಳಿವೆ. ಈವರೆಗೆ 15,973 ಮನೆಗಳಿಗೆ ಮಾತ್ರ ಭೇಟಿ ನೀಡಿ ಸಮೀಕ್ಷೆ ನಡೆಸಲಾಗಿದೆ. ಪ್ರತಿ ದಿನ ಆಯಾ ತಾಲೂಕಿನ ತಹಸೀಲ್ದಾರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಗತಿ ಕುರಿತು ಪರಿಶೀಲನೆ ನಡೆಸಿ ಶೇ.100 ರಷ್ಟು ಸಾಧನೆ ಹಾಗೂ ಆಯಾ ದಿನ ನಿಗದಿಪಡಿಸಿರುವ ಗುರಿ ಸಾಧಿಸಬೇಕು ಎಂದು ನಿರ್ದೇಶನ ನೀಡಬೇಕು ಎಂದರು.

ಸಮೀಕ್ಷೆಗೆ 1889 ಗಣತಿದಾರರನ್ನು ನೇಮಕ ಮಾಡಲಾಗಿದೆ. ಸಮೀಕ್ಷೆ ನಡೆಸುವ ಸಂದರ್ಭದಲ್ಲಿ ತಹಸೀಲ್ದಾರ್, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೋಡಲ್ ಅಧಿಕಾರಿಗಳು ಗಣತಿದಾರರು ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪ್ರತಿದಿನದ ಸಮೀಕ್ಷೆಯ ವಿವರಗಳನ್ನು ಖುದ್ದಾಗಿ ಜಿಲ್ಲಾಡಳಿತಕ್ಕೆ ನೀಡಬೇಕು. ಮುಂದಿನ ಮೂರು ದಿನಗಳಲ್ಲಿ ಜಿಲ್ಲೆಯಲ್ಲಿರುವ ಎಲ್ಲ ಪರಿಶಿಷ್ಟ ಜಾತಿ ಅವರ ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆಯನ್ನು ನಡೆಸಬೇಕು ಎಂದು ಗಡುವು ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ಉಪ ವಿಭಾಗಾಧಿಕಾರಿ ಶಿವಮೂರ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಾಜಮೂರ್ತಿ, ನಗರಸಭೆ ಪೌರಾಯುಕ್ತ ಪಂಪಶ್ರೀ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.