ಉಡುಪಿ: ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ಮಂಗಳೂರು ಜಿಲ್ಲೆಗಳಲ್ಲಿ ಅಗ್ನಿಪಥ್ ಯೋಜನೆಗೆ ಪೂರಕವಾಗಿ ಸೇನಾ ಆಯ್ಕೆ ಪೂರ್ವ ತರಬೇತಿ ಸಂಸ್ಥೆಗಳನ್ನು ಆರಂಭಿಸಲಾಗುತ್ತಿದ್ದು, ಪ್ರತಿ ತರಬೇತಿ ಸಂಸ್ಥೆಯಲ್ಲಿ 4 ತಿಂಗಳು 100 ಮಂದಿ ಯುವಕರಿಗೆ ತರಬೇತಿಯನ್ನು ನೀಡಲಾಗುವುದು. ಮುಂದಿನ ದಿನಗಳಲ್ಲಿ ರಾಜ್ಯದ 31 ಜಿಲ್ಲೆಗಳಿಗೂ ತರಬೇತಿ ಯೋಜನೆ ವಿಸ್ತರಿಸಲಾಗುವುದು ಎಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸೋಮವಾರ ಶೇಷಶಯನ ಸಭಾಂಗಣದಲ್ಲಿ ಹಿಂದುಳಿದ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಕೋಟಿ-ಚೆನ್ನಯ ಸೇನಾ ಪೂರ್ವ ತರಬೇತಿ ಸಂಸ್ಥೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಾರ್ಕೂರಿನ ನ್ಯಾಶನಲ್ ಶಾಲೆ ಕಟ್ಟಡದಲ್ಲಿ ಕೋಟಿ ಚೆನ್ನಯ ಸೇನಾ ಆಯ್ಕೆ ಪೂರ್ವ ತರಬೇತಿ ಸಂಸ್ಥೆ ಕಾರ್ಯಾರಂಭ ಮಾಡಲಿದ್ದು, ಅಭ್ಯರ್ಥಿಗಳಿಗೆ ಊಟ, ವಸತಿ ಮತ್ತು ಹಾಸ್ಟೆಲ್ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀರ ರಾಣಿ ಅಬ್ಬಕ್ಕ, ಉಡುಪಿ ಜಿಲ್ಲೆಯಲ್ಲಿ ಕೋಟಿ-ಚೆನ್ನಯ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಯೋಧ ಹೆಂಜ ನಾಯ್ಕ್ ಹೆಸರಿನಲ್ಲಿ ತರಬೇತಿ ಸಂಸ್ಥೆ ಪ್ರಾರಂಭಿಸಲಾಗುತ್ತಿದೆ ಎಂದರು.
ಯುವತಿಯರಿಗೂ ತರಬೇತಿ
ಕೋಟಿ-ಚೆನ್ನಯ ಸಂಸ್ಥೆಗೆ ಪ್ರಥಮ ಹಂತದಲ್ಲಿ 60 ಜನ ಆಯ್ಕೆಯಾಗಿದ್ದಾರೆ. ಎರಡನೇ ಹಂತದಲ್ಲಿ ಎಲ್ಲಾ 100 ಅಭ್ಯರ್ಥಿಗಳು ಆಯ್ಕೆಯಾಗುವ ಅವಕಾಶಗಳಿವೆ. ಮಂಗಳೂರು ಮತ್ತು ಉತ್ತರ ಕನ್ನಡದಲ್ಲೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ದ.ಕ ಜಿಲ್ಲೆಯಲ್ಲಿ 100 ಅಭ್ಯರ್ಥಿಗಳು ಭರ್ತಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 700ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಮುಂದಿನ ದಿನಗಳಲ್ಲಿ ಯುವತಿಯರಿಗೂ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಪ್ರಾರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ತರಬೇತಿ ಸಂಸ್ಥೆ ಉದ್ಘಾಟಿಸಿದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಕಲ್ಮಾಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಜಂಟಿ ನಿರ್ದೇಶಕ ಪ್ರದೀಪ್, ವಿ.ಪ. ಮಾಜಿ ಸದಸ್ಯ ಗಣೇಶ್ ಕಾರ್ಣಿಕ್, ಆಹಾರ ನಿಗಮ ಅಧ್ಯಕ್ಷ ಕಿರಣ್ ಕೊಡ್ಗಿ, ಜಿಲ್ಲಾಧಿಕಾರಿ ಕೂರ್ಮಾ ರಾವ್, ಜಿಪಂ ಸಿಇಒ ಪ್ರಸನ್ನ ಎಚ್., ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಸಚಿನ್ ಕುಮಾರ್ ಉಪಸ್ಥಿತರಿದ್ದರು.