ಜಿಲ್ಲೆ

ಯೋಜನೆ ಅನುಷ್ಠಾನಗೊಳಿಸುವಲ್ಲಿ ಶ್ರೀಧರ್ಮಸ್ಥಳ ಸಂಘ ಮಾದರಿಯಾಗಿದೆ

ಬೆಳಗಾವಿ : ಯಾವುದೇ ಸ್ವಾರ್ಥವಿಲ್ಲದೆ ಮಹಿಳಾ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿರುವುದು ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಮಾದರಿಯಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
 

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಸಾಮೂಹಿಕ ಶ್ರೀವರಮಹಾಲಕ್ಷ್ಮೀ ಪೂಜಾ ಸಮಿತಿ ಮತ್ತು ಪ್ರಗತಿ ಬಂಧು ಜ್ಞಾನವಿಕಾಸ ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಂಡಿಗೇರಿ ವಲಯದ ಸಹಯೋಗದಲ್ಲಿ ಬೆಂಡಿಗೇರಿಯ  ಶ್ರೀಸಂಗಮೇಶರವರ ದೇವಸ್ಥಾನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಾಮೂಹಿಕ ಪೂಜಾ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಧರ್ಮಾಧಿಕಾರಿಗಳದ ಡಾ.ವಿರೇಂದ್ರ ಹೆಗ್ಗಡೆ ಅವರು, ಮಹಿಳೆಯರ ಕಲ್ಯಾಣಕ್ಕಾಗಿ ಮಹತ್ವದ ಯೋಜನೆಗಳನ್ನು ಪರಿಚಯಿಸುವ ಮೂಲಕ ಮಹಿಳೆಯರ ಕಲ್ಯಾಣಕ್ಕಾಗಿ ಸ್ಪಷ್ಟ ನಿಲುವು ಹೊಂದಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದರು.

ಜಿಲ್ಲಾ ನಿರ್ದೇಶಕ ಸತೀಶ ನಾಯ್ಕ್ ರವರು ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಮತ್ತು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.  ಮಲ್ಲಯ್ಯ ಶಿವ ಬುದ್ದಯ್ಯ ಹಿರೇಮಠ ಸ್ವಾಮೀಜಿ ಮತ್ತು  ಶಂಕ್ರಯ್ಯ ಸುರಗಿಮಠ ಸ್ವಾಮೀಜಿ  ದಿವ್ಯ ಸಾನಿಧ್ಯ ವಹಿಸಿದ್ದರು.  ಗ್ರಾಪಂ ಅಧ್ಯಕ್ಷ ಶಿವಾನಂದ ಚಂಡು ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಯೋಜನಾಧಿಕಾರಿ ಯೋಗೀಶ ಸೇರಿದಂತೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.