ಜಿಲ್ಲೆ

1,390 ದಿವ್ಯಾಂಗರಿಗೆ ಸಾಧನ ಸಲಕರಣೆ ವಿತರಣೆ

ಗೋಪಾಲಕೃಷ್ಣ ಪಾದೂರ್

ಉಡುಪಿ: ಕೇಂದ್ರ ಸರ್ಕಾರ ನೆರವಿನಿಂದ ಜಿಲ್ಲೆಯಲ್ಲಿನ ಎಲ್ಲಾ ದಿವ್ಯಾಂಗರಿಗೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ನೀಡಲು ಬದ್ಧವಾಗಿದ್ದು, ಈ ಬಗ್ಗೆ ಸಮಗ್ರ ಸರ್ವೆ ನಡೆಸಿ, ಅರ್ಹರ ಪಟ್ಟಿಯನ್ನು ನೀಡುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶನಿವಾರ ನಗರದ ಮಿಷನ್ ಕಾಂಪೌಂಡ್ ಬೆಸೆಲ್ ಮಿಷನರೀಸ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆ ಹಾಗೂ ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ (ಅಲಿಮ್ಕೋ) ಸಹಯೋಗದಲ್ಲಿ ಸಾಮಾಜಿಕ ಅಧಿಕಾರಿತಾ ಶಿಬಿರ ಯೋಜನೆಯಡಿ ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆಲಿಂಕೋ ವತಿಯಿಂದ ದೇಶದಾದ್ಯಂತ ವಿಕಲಚೇತನರಿಗೆ ಉಚಿತ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತಿದ್ದು , ಉಡುಪಿ ಜಿಲ್ಲೆಯಲ್ಲಿ ಅತ್ಯಂತ ಹೆಚ್ಚು ದಿವ್ಯಾಂಗರಿಗೆ ದೈನಂದಿನ ಕೆಲಸ ಕಾರ್ಯಗಳನ್ನು ಸುಗಮವಾಗಿ ನಿರ್ವಹಿಸಲು ಸೂಕ್ತ ಪರಿಕರಗಳನ್ನು ವಿತರಿಸಲಾಗಿದೆ. ಪ್ರಸ್ತುತ 1,390 ದಿವ್ಯಂಗರಿಗೆ 2,144 ಸಾಧನಾ ಪರಿಕರಗಳನ್ನು ವಿತರಿಸಲಾಗುತ್ತಿದೆ ಎಂದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾಧಿಕಾರಿ ಕೂರ್ಮರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರಸನ್ನ , ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಮಹಿಳಾ ಮತ್ತು ಮಕ್ಕಳ ಇಲಾಖೆ ಉಪ ನಿರ್ದೇಶಕ ಶಿವಕುಮಾರಯ್ಯ, ಜಿಲ್ಲಾ ವಿಕಲಚೇತನ ಅಧಿಕಾರಿ ರತ್ನ, ಉಡುಪಿ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರುರು ರಾಜೀವ ಶೆಟ್ಟಿ ಮತ್ತಿತರರು ಉಪಸಿತರಿದ್ದರು. ಅಲಿಂಕೋ ಸಂಸ್ಥೆಯ ಸೀನಿಯರ್ ಮ್ಯಾನೇಜರ್ ಅಶೋಕ್ ಕುಮಾರ್ ಸ್ವಾಗತಿಸಿದರು. ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ವೀಣಾ ವಿವೇಕಾನಂದ ವಂದಿಸಿದರು.