ನಗರದ ದೇವರಾಜ ಅರಸು ರಸ್ತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕಾರಿನಿಂದ ಅಪಘಾತಕ್ಕೊಳಗಾಗಿ ಗಾಯಗೊಂಡು ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೌರಕಾರ್ಮಿಕ ಮಹದೇವ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಗುರುವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕರ್ತವ್ಯದ ವೇಳೆ ಅಪಘಾತಕ್ಕೀಡಾದ ಮಹದೇವ ಅವರ ಆರೋಗ್ಯ ಕುರಿತು ವೈದ್ಯರ ಜತೆ ಮಾತಾನಾಡಿದ್ದೇನೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ತೀವ್ರ ಗಾಯಗೊಂಡಿರುವ ಅವರ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.
ಮಹದೇವ ಅವರು ಚಿಕ್ಕ ವಯಸ್ಸಿನಲ್ಲೇ ಈ ರೀತಿ ಗಾಯಗೊಂಡಿರುವುದು ನೋವಿನ ಸಂಗತಿ. ಕುಟುಂಬಕ್ಕೆ ಅವರೇ ಆಧಾರ ಸ್ತಂಭವಾಗಿದ್ದರು. ಹೀಗಾಗಿ ಅವರ ಜೀವನೋಪಾಕ್ಕಾಗಿ ಅಗತ್ಯ ಆರ್ಥಿಕ ನೆರವು ನೀಡಲಾಗುವುದು. ಈ ಸಂಬಂಧ ನಮ್ಮ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ಅವರೊಂದಿಗೆ ಚರ್ಚಿಸಿದ್ದೇನೆ ಎಂದರು.
ಕುಟುಂಬದವರ ಜೀವನ ನಿರ್ವಹಣೆಗಾಗಿ ಅವರ ಪತ್ನಿಗೆ ಉದ್ಯೋಗ ನೀಡುವುದರ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಸದ್ಯಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ಅವರಿಗೆ ಅಗತ್ಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ಮಾಜಿ ಮೇಯರ್ ನಾರಾಯಣ್ ಇದ್ದರು.