ಶಿವಮೊಗ್ಗ: ಶಿಕ್ಷಣ ಸಚಿವರೆ, ಮನಸ್ಸಿಗೆ ಬಂದಂತೆ ಮಾತನಾಡಿ ಜಿಲ್ಲೆಯ ಜನರ ಗೌರವ ಹಾಳು ಮಾಡಬೇಡಿ. ನೀವು ನಿರ್ವಹಿಸುತ್ತಿರುವ ಖಾತೆ ಘನತೆಗೆ ತಕ್ಕಂತೆ ಮಾತನಾಡಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಬಗ್ಗೆ ಮಧು ಬಂಗಾರಪ್ಪ ಮಾಡಿದ ಟೀಕೆಗೆ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದ ಬಿವೈಆರ್, ಯಡಿಯೂರಪ್ಪ ಬಗ್ಗೆ ಮಾತನಾಡುವ ಯೋಗ್ಯತೆ ನಿಮಗಿದೆಯೇ? ಎಂದು ಪ್ರಶ್ನಿಸಿದರು.
ಶಿವಮೊಗ್ಗ ಜಿಲ್ಲೆ ಅನೇಕ ಸಚಿವರನ್ನು ನೋಡಿದ್ದು, ಸಿಎಂಗಳನ್ನೂ ಕಂಡಿದೆ. ಆದರೆ ಇಂತಹ ಸಚಿವರು ಬಂದಿರಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಯಾರನ್ನೋ ಮೆಚ್ಚಿಸಲು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.
ಬಿ.ಎಸ್.ಯಡಿಯೂರಪ್ಪ ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಧು ಬಂಗಾರಪ್ಪ ಆರೋಪಿಸಿರುವುದು ಹಾಸ್ಯಾಸ್ಪದ. ಬಿಎಸ್‌ವೈ ಸಿಎಂ ಆಗಿದ್ದಾಗ ಹಿಂದುಳಿದ ಜಾತಿಗಳ ಅಭಿವೃದ್ಧಿಗೆ ಹಲವು ನಿಗಮಗಳನ್ನು ಸ್ಥಾಪಿಸಿ ಅದಕ್ಕೆ ಅನುದಾನವನ್ನು ನೀಡಿದ್ದರು. ಅವರು ರೂಪಿಸಿದ್ದ ಯೋಜನೆಗಳು ಸರ್ವಸ್ಪರ್ಶಿಯಾಗಿದ್ದವು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಪ್ರಮುಖರಾದ ರಾಜು ತಲ್ಲೂರು, ಜಿ.ಇ.ವಿರೂಪಾಕ್ಷಪ್ಪ, ಚಂದ್ರಶೇಖರ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.