ವಿಜಯವಾಣಿ ಸುದ್ದಿಜಾಲ ಉಡುಪಿ
ಇಂದಿನ ಯುವಸಮುದಾಯವೇ ದೇಶದ ಉಜ್ವಲ ಭವಿಷ್ಯವಾಗಿದೆ. ಇಂದು ನಾವಿದ್ದೇವೆ, ಮುಂದಿನ ದಿನಗಳಲ್ಲಿ ತಾವುಗಳು ಬರುತ್ತೀರಿ. ತಲೆತಲಾಂತರದ ನಮ್ಮ ಸಂಪ್ರದಾಯ ಹಾಗೂ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಹೋಗುವ ಮಹತ್ತರ ಜವಾಬ್ದಾರಿ ತಮ್ಮ ಮೇಲಿದೆ. ಸಮಸ್ತ ವಿಶ್ವಕ್ಕೇ ನಮ್ಮ ಭಾರತವು ಯೋಗ ಸಂಸ್ಕೃತಿಯನ್ನು ನೀಡಿದೆ. ಅದನ್ನು ರಕ್ಷಿಸಿ, ಮುನ್ನಡೆಸುವ ಜವಾಬ್ದಾರಿ ಎಲ್ಲರದ್ದೂ ಆಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಉಡುಪಿಯ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಆಯುಷ್ ಇಲಾಖೆ ಹಾಗೂ ಇನ್ನಿತರ ಇಲಾಖೆ ಸಹಭಾಗಿತ್ವದಲ್ಲಿ ಜೂನ್ 21ರಂದು ಆಯೋಜಿಸಿದ್ದ ಅಂತಾರಾಷ್ಟ್ರೀಯ 11ನೇ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯೋಗದ ವಿಶೇಷತೆ ಹಾಗೂ ಮಹತ್ವದ ಕುರಿತಾಗಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ಮಾತನಾಡಿದರು.
ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಅಶೋಕ ಕೊಡವೂರು, ಉಡುಪಿ ತಾಲೂಕು ಅಧ್ಯಕ್ಷ ರಮೇಶ ಕಾಂಚನ್, ಪ್ರಸಾದರಾಜ್ ಕಾಂಚನ್, ಉದಯಕುಮಾರ್ ಮುನಿಯಾಲು, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಜಿಪಂ ಸಿಇಒ ಪ್ರತೀಕ ಬಾಯಲ್, ಡಿಎಫ್ಒ ಗಣಪತಿ ಉಪಸ್ಥಿತರಿದ್ದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಸತೀಶ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಡಾ. ಹೇಮಲತಾ ವಂದಿಸಿದರು.
ಉಡುಪಿ ಜಿಲ್ಲೆ ಎಸ್ಎಸ್ಎಲ್ಸಿಯಲ್ಲಿ ಎರಡನೇ ಹಾಗೂ ಪಿಯುಸಿಯಲ್ಲಿ ಮೊದಲ ಸ್ಥಾನ ಗಳಿಸಿದ್ದು ಶೈಕ್ಷಣಿಕವಾಗಿ ತನ್ನ ಸಾಮರ್ಥ್ಯ ಹೆಚ್ಚಿಸಿಕೊಂಡಿದೆ. ದೇಶದ ಸಂಸ್ಕೃತಿ, ಆಚಾರ-ವಿಚಾರವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಗುರು-ಹಿರಿಯರನ್ನು ಗೌರವಿಸಬೇಕು. ಪಾಲಕರು ಮಕ್ಕಳೇ ನಮ್ಮ ಆಸ್ತಿ ಎನ್ನುತ್ತಾರೆ. ಅದರಂತೆ ಮಕ್ಕಳೂ ಸಹ ತಂದೆ-ತಾಯಿಯೇ ನಮ್ಮ ಆಸ್ತಿ ಎನ್ನುವಂತೆ ನೋಡಿಕೊಳ್ಳಬೇಕು. | ಲಕ್ಷ್ಮೀ ಹೆಬ್ಬಾಳ್ಕರ್. ಉಡುಪಿ ಉಸ್ತುವಾರಿ ಸಚಿವೆ