ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಜಾತಿ ಗಣತಿಗೆ ಎಂದಿಗೂ ನಮ್ಮ ವಿರೋಧವಿಲ್ಲ. ಆದರೆ, ಈಗ ವೀರಶೈವ ಮತ್ತು ಲಿಂಗಾಯತರನ್ನು ಪ್ರತ್ಯೇಕವಾಗಿ ಗಣತಿ ಮಾಡಲಾಗಿದೆ. ಕಳೆದ 20 ವರ್ಷಗಳಲ್ಲಿ ಎಲ್ಲ ಜಾತಿಗಳಲ್ಲಿ ಜನರು ಹೆಚ್ಚಾಗಿದ್ದಾರೆ. ಆದರೆ, ವೀರಶೈವ ಮತ್ತು ಲಿಂಗಾಯತರ ಜನಸಂಖ್ಯೆ ಒಡೆದು ಹೋಗಿದ್ದರಿಂದ ನಮ್ಮ ಅಂಕಿ-ಅಂಶ ಕಡಿಮೆ ಕಾಣಿಸುತ್ತಿದೆ. ಹಾಗಾಗಿ ಇನ್ನೊಮ್ಮೆ ವೀರಶೈವ-ಲಿಂಗಾಯತ ಸೇರಿಸಿ ಒಟ್ಟಾಗಿ ಜಾತಿ ಗಣತಿ ಮಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ನಿಪ್ಪಾಣಿಗೆ ಅಂಬೇಡ್ಕರ್ ಭೇಟಿ ನೀಡಿದ್ದಕ್ಕೆ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿಯವರು ಸಮಾವೇಶ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸಂವಿಧಾನವನ್ನೇ ಶ್ರದ್ಧಾ, ಭಕ್ತಿಯಿಂದ ನಂಬಿದೆ. ನಾವೆಲ್ಲರೂ ಅದನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದೇವೆ. ನಿಪ್ಪಾಣಿಯಲ್ಲಿ ಸರ್ಕಾರದಿಂದ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸುವ ಸಂಬಂಧ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಸರ್ಕಾರದಿಂದ ಕಾರ್ಯಕ್ರಮ ಮಾಡುತ್ತೇವೆ ಎಂದರು.
ದೌರ್ಜನ್ಯ ನಿಲ್ಲಲಿ: ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಹಿಂದಿನಿಂದಲೂ ಪ್ರತಿಪಾದಿಸುತ್ತ ಬಂದಿದ್ದೇನೆ. ಇಂಥ ಪ್ರಕರಣಗಳಲ್ಲಿ ಆರೋಪಿಗಳಿಗೆ ಗಲ್ಲುಶಿಕ್ಷೆ ಆಗಬೇಕು. ದೌರ್ಜನ್ಯಕ್ಕೆ ಒಳಗಾದವರಿಗೆ ತ್ವರಿತವಾಗಿ ನ್ಯಾಯ ಸಿಗಬೇಕು. ಹುಬ್ಬಳ್ಳಿ ಪ್ರಕರಣದಲ್ಲಿ ತೆಗೆದುಕೊಂಡ ಕ್ರಮಕ್ಕಾಗಿ ಅನ್ನಪೂರ್ಣ ಅವರನ್ನು ಅಭಿನಂದಿಸುತ್ತೇನೆ. ಅವರ ನಡೆ ಬೇರೆ ಅಧಿಕಾರಿಗಳಿಗೆ ದಾರಿದೀಪವಾಗಬೇಕು. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದಂಥ ಪಿಡುಗು ಸಮಾಜದಿಂದ ನಿರ್ಮೂಲನೆಯಾಗಬೇಕು ಎಂದು ಹೇಳಿದರು.
ಬಿಜೆಪಿ ಮೇಲೆ ಜನರ ಆಕ್ರೋಶ ಕಡಿಮೆ ಆಗಲ್ಲ: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಿದೆ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಹುಬ್ಬಳ್ಳಿ ಘಟನೆಯನ್ನು ರಾಜ್ಯ ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ನಾನು ಬೇರೆ ರಾಜ್ಯದ ಹೋಲಿಕೆ ಮಾಡಲು ಹೋಗುವುದಿಲ್ಲ. ಆದರೆ, ನಮ್ಮಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿಲ್ಲ. ನಮ್ಮ ಬಗ್ಗೆ ಆರೋಪಿಸುತ್ತಿರುವ ಬಿಜೆಪಿಯವರು ಮಣಿಪುರದ ಕಡೆ ಒಮ್ಮೆ ನೋಡಲಿ. ಅಲ್ಲಿಗೆ ಪ್ರಧಾನಿ ಒಮ್ಮೆಯೂ ಭೇಟಿ ಕೊಟ್ಟಿಲ್ಲ. ಇಡೀ ದೇಶದಲ್ಲಿ ಏನೇನು ಆಗುತ್ತಿದೆ ಎಂಬುದನ್ನು ಅವರು ನೋಡುತ್ತಿದ್ದೀರಾ ಎಂದು ಪ್ರಶ್ನಿಸಿದರು. ಬಿಜೆಪಿಯವರು ಎಷ್ಟೇ ಜನಾಕ್ರೋಶ ಯಾತ್ರೆ ಮಾಡಿದರೂ, ಜನರಿಗೆ ಬಿಜೆಪಿ ಮೇಲಿನ ಆಕ್ರೋಶ ಕಡಿಮೆಯಾಗುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.