ಮಡಿಕೇರಿ:
ಸಿ ಮತ್ತು ಡಿ ಜಾಗದ ಸಮಸ್ಯೆಗಳ ಬಗ್ಗೆ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಹೋರಾಟಗಳು ನಡೆಯುತ್ತಿದ್ದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಶುಕ್ರವಾರ ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವÀ ಎನ್.ಎಸ್ ಬೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ ಆದ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರನ್ನು ಭೇಟಿ ಮಾಡಿ ಸಿ ಮತ್ತು ಡಿ ಜಾಗದ ಸಮಸ್ಯೆಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಿತು.
ಸಿ ಮತ್ತು ಡಿ ಜಾಗದ ಸಮಸ್ಯೆಯಿಂದ ರೈತರಿಗೆ ಉಂಟಾಗಿರುವ ಅನಾನುಕೂಲಗಳ ಬಗ್ಗೆ ಸಭೆಯಲ್ಲಿ ರೈತರ ಪರವಾಗಿ ಧ್ವನಿ ಎತ್ತಿದ ಕೊಡಗು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಂ. ಲೋಕೇಶ್ ಈ ವಿಚಾರದ ಬಗ್ಗೆ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಹಾಗೂ ರೈತರ ಆತಂಕವನ್ನು ದೂರ ಮಾಡುವಂತೆ ಉಸ್ತುವಾರಿ ಸಚಿವರು ಹಾಗೂ ಶಾಸಕದ್ವಯರಿಗೆ ರೈತರ ಪರವಾಗಿ ಮನವಿ ಮಾಡಿದರು. ಈ ಮನವಿಗೆ ಸ್ಪಂದಿಸಿದ ಉಸ್ತುವಾರಿ ಸಚಿವರು ಸಿ ಮತ್ತು ಡಿ ಜಾಗದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಮಿಟಿ ರಚನೆ ಮಾಡಲಾಗುವುದು. ಮಂಗಳವಾರ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ಮುಖಂಡರುಗಳೊAದಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗುವುದೆಂದರು.
ಶಾಸಕ ಡಾ.ಮಂತರ್ ಗೌಡ ಮಾತನಾಡಿ ಸೋಮವಾರ ಸದನದಲ್ಲಿ ಸಿ ಮತ್ತು ಡಿ ಜಾಗದ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಗುವುದೆಂದರು. ಈ ಸಭೆಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಕಾಂಗ್ರೆಸ್ ಮುಖಂಡರಾದ ಕೆ.ಪಿ. ಚಂದ್ರಕಲಾ, ಸೋಮವಾರಪೇಟೆ ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಜೆ.ಎಲ್. ಜನಾರ್ದನ್, ಕಾಂಗ್ರೆಸ್ ಮುಖಂಡರಾದ ಟಿ. ಪಿ. ರಮೇಶ್, ಕೊಲ್ಯದ ಗಿರೀಶ್, ನಟೇಶ್ ಗೌಡ, ಖಾಲಿದ್, ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ್ ಇದ್ದರು.