ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಚಿವ ಎನ್.ಎಸ್ ಬೋಸರಾಜು ಅವರಿಗೆ ಕಾರ್ಯಕರ್ತರು ಮನವಿ ಸಲ್ಲಿಸಿದರು. ರಕ್ಷಿತ್ ಶಿವಾರಂ, ಶೇಖರ್ ಕುಕ್ಕೇಡಿ, ಪ್ರವೀಣ್ ಫರ್ನಾಂಡಿಸ್ ಮೊದಲಾದವರಿದ್ದರು.
ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಮೂಲಕವೇ ಬಿಜೆಪಿ ಗೆಲುವು ಸಾಧಿಸಿದೆ. ಅಲ್ಲಿ 95 ಲಕ್ಷ ಮತದಾರರನ್ನು ಕೈಬಿಡಲಾಗಿದೆ. ನಮ್ಮ ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಯಾವುದೇ ರೀತಿಯ ಗೊಂದಲ ಉಂಟಾಗದಂತೆ, ಅನಗತ್ಯ ಮತದಾರರನ್ನು ಕೈ ಬಿಡದಂತೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ ಎನ್.ಎಸ್. ಬೋಸರಾಜು ಕರೆ ನೀಡಿದರು.
ಬೆಳ್ತಂಗಡಿ ಪ್ರವಾಸ ಹಿನ್ನೆಲೆಯಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಮಂಗಳವಾರ ಭೇಟಿ ನೀಡಿದ ಸಚಿವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಮಾತನಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡಿ, ನದಿ ಸಮೀಪವುಳ್ಳ ದೇಗುಲ, ಮಸೀದಿ ಸಹಿತ ಅಲ್ಲಲ್ಲಿ ತಡೆಗೋಡೆ ನಿರ್ಮಾಣಕ್ಕೆ ಅನುದಾನ ಒದಗಿಸಬೇಕು ಎಂದು ಸಚಿವರಿಗೆ ಮನವಿ ಮಾಡಿದರು.
ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫರ್ನಾಂಡಿಸ್ ಹಳ್ಳಿಮನೆ, ಅಝರ್ ನಾವೂರು, ತಾಲೂಕು ಗ್ರಾಮ, ಬೂತ್ ಮಟ್ಟದ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಕೆ.ಎಂ.ನಾಗೇಶ್ ಕುಮಾರ್ ಗೌಡ ಸ್ವಾಗತಿಸಿ ನಿರೂಪಿಸಿದರು. ದಯಾನಂದ ಬೆಳಾಲು ವಂದಿಸಿದರು.
ದೇವಳಗಳಿಗೆ ಭೇಟಿ, ಕಾಮಗಾರಿ ವೀಕ್ಷಣೆ
ಶ್ರೀ ಕ್ಷೇತ್ರ ಧರ್ಮಸ್ಥಳ, ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಕೊಕ್ಕಡದ ಮೈಪಾಲದಲ್ಲಿ ಪೂರ್ಣಗೊಂಡಿರುವ ಕಿಂಡಿ ಅಣೆಕಟ್ಟು ಸಹಿತ ಸೇತುವೆ ಕಾಮಗಾರಿಯನ್ನೂ ವೀಕ್ಷಿಸಿದರು.