ಜಿಲ್ಲೆ

ಶಿಕ್ಷಕರ ನೇಮಕ, ಮೂಲಸೌಕರ್ಯಕ್ಕೆ ಆದ್ಯತೆ

ಜಗಳೂರು: ಜಿಲ್ಲೆಯಲ್ಲಿ ಶಿಕ್ಷಕರ ನೇಮಕ ಮತ್ತು ಶಾಲೆಗಳಿಗೆ ಮೂಲಸೌಕರ್ಯ ಕಲ್ಪಿಸಲಾಗುವುದು ಎಂದು ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಭರವಸೆ ನೀಡಿದರು.

ತಾಲೂಕಿನ ಕಾಮಗೇತನಹಳ್ಳಿಯಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ, ಡಿ. ದೇವರಾಜ್ ಅರಸು ವಿದ್ಯಾರ್ಥಿ ನಿಲಯವನ್ನು ಉದ್ಘಾಟಿಸಿ ಮಾತನಾಡಿದರು.

ಸುಮಾರು 22.5 ಕೋಟಿ ರೂ. ಯಲ್ಲಿ ವಸತಿ ಶಾಲೆ ನಿರ್ಮಾಣ ಮಾಡಲಾಗಿದೆ. ಎಚ್. ಆಂಜನೇಯ ಸಚಿವರಾಗಿದ್ದಾಗ ಜಗಳೂರು ಕ್ಷೇತ್ರಕ್ಕೆ ವಸತಿ ಶಾಲೆ, ವಿದ್ಯಾರ್ಥಿ ನಿಲಯ, ಭೂಮಿ ಮಂಜೂರು, ಸಮುದಾಯ ಭವನ, ಸಿಸಿ ರಸ್ತೆಗೆ ಸಾಕಷ್ಟು ಅನುದಾನ ಬಿಡುಗಡೆಗೊಳಿಸಿ ಅಭಿವೃದ್ಧಿ ಪಡಿಸಿದ್ದರು ಎಂದರು.

ಕೇಂದ್ರ ಸರ್ಕಾರದಿಂದಲೂ ಅನುದಾನ ಬರುತ್ತಿದ್ದು, ರಾಜ್ಯ ಸರ್ಕಾರದ ಅನುದಾನವನ್ನು ಕ್ರೋಡೀಕರಿಸಿ ಶಾಲೆಗಳನ್ನು ನಿರ್ವಿುಸಲಾಗುತ್ತಿದೆ. ತಾಲೂಕಿನ ಮಾಗಡಿ ಬಳಿ ಸುಮಾರು 18 ಎಕರೆ ಜಾಗದಲ್ಲಿ ಏಕಲವ್ಯ ಶಾಲೆ ಮಂಜೂರಾದರೆ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.

ಶಾಸಕ ಬಿ. ದೇವೇಂದ್ರಪ್ಪ ಮಾತನಾಡಿ, ಅಲ್ಪ ಸಂಖ್ಯಾತರ ವಸತಿ ಶಾಲಾ ಕಟ್ಟಡಕ್ಕೆ 16 ಕೋಟಿ ರೂ. ಅನುದಾನ ಮಂಜೂರಾಗಿದೆ. ಆದಷ್ಟು ಬೇಗ ಕಟ್ಟಡ ಪೂರ್ಣಗೊಳಿಸಿ ಉದ್ಘಾಟಿಸಲಾಗುವುದು ಎಂದರು.

ಪಟ್ಟಣದಲ್ಲಿ ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಆಸ್ಪತ್ರೆಯನ್ನು ತೆರವುಗೊಳಿಸಿ ಹೊಸ ಆಸ್ಪತ್ರೆ ನಿರ್ವಿುಸಬೇಕಿದೆ. ಸರ್ಕಾರಿ ಬಸ್ ಡಿಪೋ ನಿರ್ವಣಕ್ಕೆ ಹಣ ಮಂಜೂರು ಮಾಡಿಸಬೇಕು ಎಂದು ಶಾಸಕ ಸಚಿವರಿಗೆ ಮನವಿ ಮಾಡಿದರು.

ಜಿಲ್ಲಾಧಿಕಾರಿ ಗಂಗಾಧರಸ್ವಾಮಿ, ದೊಣೆಹಳ್ಳಿ ಗ್ರಾಪಂ ಅಧ್ಯಕ್ಷ ಕೆ. ತಿಪ್ಪೇಸ್ವಾಮಿ, ಕೆಪಿಸಿಸಿ ಎಸ್ಟಿ ವಿಭಾಗದ ಮಾಜಿ ಅಧ್ಯಕ್ಷ ಕೆ.ಪಿ. ಪಾಲಯ್ಯ, ಕೆಪಿಸಿಸಿ ಎಸ್ಟಿ ವಿಭಾಗದ ಅಧ್ಯಕ್ಷ ಎಂ.ಡಿ. ಕೀರ್ತಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮದ್, ಕಂಬತ್ತಳ್ಳಿ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಗಾಯಿತ್ರಿ, ಅಲ್ಪ ಸಂಖ್ಯಾತ ಇಲಾಖೆ ಉಪ ನಿರ್ದೇಶಕ ನವೀನ್ ಮಠದ್, ತಾಪಂ ಇಒ ಕೆಂಚಪ್ಪ , ಸಮಾಜ ಕಲ್ಯಾಣಾಧಿಕಾರಿ ಪರಮೇಶ್ವರಪ್ಪ, ಗ್ರಾಪಂ ಸದಸ್ಯ ಸಿದ್ದಲಿಂಗಪ್ಪ, ಗುತ್ತಿಗೆದಾರ ಪಿ. ಗಿರೀಶ್, ಇಂಜಿನಿಯರ್ ತಿಪ್ಪೇಸ್ವಾಮಿ ಮತ್ತಿತರರಿದ್ದರು.

ಅಧಿಕಾರಿಗಳಿಗೆ ಎಚ್ಚರಿಕೆ: ವಸತಿ ಶಾಲೆ ಬಯಸಿ ಬರುವ ತಾಲೂಕಿನ ಬಡ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ದಾಖಲು ಮಾಡಿಕೊಳ್ಳಬೇಕು ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅಧಿಕಾರಿಗಳಿಗೆ ಎಚ್ಚರಿಸಿದರು. ಜಿಲ್ಲೆಯಲ್ಲಿ ಸರ್ಕಾರಿ ಜಾಗವಿರುವ ಕಡೆ ವಸತಿಯುತ ಶಾಲೆಗಳನ್ನು ನಿರ್ವಿುಸಲಾಗುವುದು. ಜಾಗ ಕೊರತೆ ಇರುವ ಕಡೆ ಒಂದೇ 300-500 ರವರೆಗೂ ವಿದ್ಯಾರ್ಥಿಗಳನ್ನು ದಾಖಲಿಸುವ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.