ಜಿಲ್ಲೆ

ಜನರ ಸಮಸ್ಯೆ ನಿವಾರಣೆಯಲ್ಲಿ ನಿರ್ಲಕ್ಷ್ಯ ಸಲ್ಲ: ಪಾಲಿಕೆಗಳ ಮುಖ್ಯಸ್ಥರಿಗೆ ಸಚಿವ ಸುರೇಶ ಸೂಚನೆ

ಬೆಂಗಳೂರು: ಸಾರ್ವಜನಿಕರ ಕುಂದು-ಕೊರತೆಗಳನ್ನು ನಿವಾರಿಸುವಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರು ಮಹಾನಗರಪಾಲಿಕೆಗಳ ಆಯುಕ್ತರಿಗೆ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಎಲ್ಲ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಪಾಲಿಕೆಗಳ ವ್ಯಾಪ್ತಿಯಲ್ಲಿನ ನಾಗರಿಕರಿಂದ ದೂರು ಬಂದ ತಕ್ಷಣ ಆ ಸಮಸ್ಯೆಯನ್ನು ಪರಿಹರಿಸಬೇಕು. ಯಾವುದೇ ಕಾರಣಕ್ಕೂ ನಾಗರಿಕರು ಇಲಾಖೆಯ ಕೇಂದ್ರ ಕಚೇರಿಯವರೆಗೆ ಸಮಸ್ಯೆಗಳನ್ನು ಹೊತ್ತು ತಾರದ ರೀತಿ ಕರ್ತವ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅನುದಾನವನ್ನು ಕಾಲಮಿತಿಯೊಳಗೆ ಬಳಕೆ ಮಾಡಿಕೊಂಡು ನಾಗರಿಕರಿಗೆ ಸೌಲಭ್ಯ ಒದಗಿಸಬೇಕು. ಕೇಂದ್ರದ ಯೋಜನೆಗಳ ಬಗ್ಗೆಯೂ ಹೆಚ್ಚಿನ ಆಸಕ್ತಿ ವಹಿಸಬೇಕು. ಪಾಲಿಕೆ ವ್ಯಾಪ್ತಿಯಲ್ಲಿನ ಕಸ ವಿಲೇವಾರಿ ಸಮಸ್ಯೆ, ರಸ್ತೆಗಳ ಕಾಮಗಾರಿ ಸೇರಿ ಇನ್ನಿತರ ಕಾಮಗಾರಿಗಳನ್ನು ಲೋಪವಾಗದ ರೀತಿಯಲ್ಲಿ ಕೈಗೊಳ್ಳಬೇಕು. ಇ-ಖಾತಾ ಸೌಲಭ್ಯವನ್ನು ಅರ್ಹ ನಾಗರಿಕರಿಗೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಪೌರಕಾರ್ಮಿಕರ ಸಮಸ್ಯೆ ಪರಿಹರಿಸಿ:

ಸರ್ಕಾರದಿಂದ ಮಂಜೂರಾಗುವ ಅನುದಾನವನ್ನು ಸೂಕ್ತ ಸಮಗ್ರ ಯೋಜನೆಯನ್ನು ಸಿದ್ಧಪಡಿಸಿ ಆ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪೌರಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಹೆಚ್ಚಿನ ನಿಗಾ ವಹಿಸಬೇಕು. ಸರ್ಕಾರಕ್ಕೆ ಕೆಟ್ಟ ಹೆಸರು ಬಾರದ ರೀತಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸಚಿವರು ಸೂಚಿಸಿದರು.

ಸಭೆಯಲ್ಲಿ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ ಪ್ರಭುಲಿಂಗ ಕವಳಿಕಟ್ಟಿ, ವಿವಿಧ ಪಾಲಿಕೆ ಆಯುಕ್ತರು ಮತ್ತು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.