ಜಿಲ್ಲೆ

ಮಳೆಹಾನಿ ಪೀಡಿತ ಪ್ರದೇಶಗಳಿಗೆ ಸಚಿವರ ಭೇಟಿ

ಸುನಿಲ್ ಪೊನ್ನೇಟಿ

ಮಡಿಕೇರಿ:

ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬುಧವಾರ ಜಿಲ್ಲೆಯ ಮಳೆಹಾನಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಈ ಸಂದರ್ಭ ಅಧಿಕಾರಿಗಳಿಂದ ಮಾಹಿತಿ ಪಡೆದ ಉಭಯ ಸಚಿವರು ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕಾರ್ಯನಿರ್ವಹಿಸಲು ಸೂಚನೆ ನೀಡಿದರು. ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬAಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾರಂಗಿ ಪ್ರವಾಸಿ ಮಂದಿರದಲ್ಲಿ ಸಚಿವರುಗೆ ವಿವಿಧ ಮಾಹಿತಿ ನೀಡಿದರು. ರಸ್ತೆ, ಸೇತುವೆ, ವಿದ್ಯುತ್ ಕಂಬ ಮತ್ತು ಪರಿವರ್ತಕಗಳು, ಬೆಳೆ ಹಾಗೂ ಮನೆ ಹಾನಿ… ಹೀಗೆ ಪ್ರಾಕೃತಿಕ ವಿಕೋಪದಿಂದ ಉಂಟಾದ ನಷ್ಟದ ಬಗ್ಗೆ ವಿವರಗಳನ್ನು ನೀಡಿದರು. ನಂತರ ಸಚಿವರು ಹಾರಂಗಿ ಬಳಿ ವಾಸದ ಮನೆ ಹಾನಿ ಪ್ರದೇಶ ಅತ್ತೂರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮನೆ ಕಳೆದುಕೊಂಡ ಕುಟುಂಬದವರಿಗೆ ಧೈರ್ಯ ಹೇಳಿದರು. ಮಳೆಯಿಂದ ಹಾನಿಗೊಳಗಾದ ಕುಶಾಲನಗರ ತಾಲೂಕಿನ ಅತ್ತೂರು ಗ್ರಾಮ, ತೆಪ್ಪಗುಂಡಿ ಗ್ರಾಮಗಳಿಗೂ ಇಬ್ಬರು ಸಚಿವರು ಜಂಟಿಯಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾನಿಯಾದ ಮನೆಗಳಿಗೆ ಹಾಗೂ ಸ್ವತ್ತುಗಳಿಗೆ ಅಗತ್ಯ ಪರಿಹಾರ ನೀಡುವಂತೆ ಮತ್ತು ಪ್ರಾಣ ಹಾನಿ ಆಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಇದೆ ಸಂದರ್ಭ ಸೂಚಿಸಿದರು. ನಂತರ ವಾಲ್ನೂರು ತ್ಯಾಗತ್ತೂರು ಪರಿಹಾರ ಮತ್ತು ಕಾಳಜಿ ಕೇಂದ್ರಕ್ಕೆ ಸಚಿವದ್ವಯರು ಮತ್ತು ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ತಹಸೀಲ್ದಾರ್ ಕಿರಣ್ ಗೌರಯ್ಯ ಇತರರು ಇದ್ದರು.