ಬೇಲೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ತಂಡದೊಂದಿಗೆ ಗುರುವಾರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಎಚ್.ಕೆ.ಸುರೇಶ್, ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲು ಸ್ವಚ್ಛತೆಗೆ ಆದ್ಯತೆ ನೀಡಬೇಕು. ರೋಗಿಗಳು ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದ ಸಂದರ್ಭ ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಬಡವರು ಮತ್ತು ಗ್ರಾಮೀಣ ಭಾಗದ ರೋಗಿಗಳೇ ಸರ್ಕಾರಿ ಆಸ್ಪತ್ರೆಗೆ ಬರುವುದು ಹೆಚ್ಚು. ಹಾಗಾಗಿ ಅವರು ಖಾಸಗಿ ಆಸ್ಪತ್ರೆಗಳಿಗೆ ಮತ್ತು ಮೆಡಿಕಲ್ ಶಾಪ್‌ಗೆ ಹೋಗುವ ಸ್ಥಿತಿ ಬರಬಾರದು. ನಮ್ಮ ಆಸ್ಪತ್ರೆಯಲ್ಲೇ ಅವರಿಗೆ ಚಿಕಿತ್ಸೆ ಮತ್ತು ನೆಮ್ಮದಿ ದೊರಕಬೇಕು ಎಂದು ಸುರೇಶ್ ಹೇಳಿದರು.
ಕೆಲ ವೈದ್ಯರು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಬರುತ್ತಿಲ್ಲ. ಈ ಬಗ್ಗೆ ಸಾರ್ವಜನಿಕರಿಂದ ಆರೋಪ ಕೇಳಿ ಬರುತ್ತಿದೆ. ಜಿಲ್ಲಾ ಆರೋಗ್ಯಾಧಿಕಾರಿ ಮತ್ತು ಆಡಳಿತ ವೈದ್ಯಾಧಿಕಾರಿ ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು. ದಾದಿಯರು ಮತ್ತು ಡಿ ಗ್ರೂಪ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ತಿಳಿಸಿದರು. ಸಾರ್ವಜನಿಕರಿಂದ ಯಾವುದೇ ದೂರುಗಳು ಬಾರದಂತೆ ಆಸ್ಪತ್ರೆ ವ್ಯವಸ್ಥೆ ನೋಡಿಕೊಳ್ಳಬೇಕು. ಇದಕ್ಕೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸುರೇಶ್ ಸೂಚಿಸಿದರು.
ಅಶಿಸ್ತಿನ ಸಿಬ್ಬಂದಿ ವಿರುದ್ಧ ಕ್ರಮ: ಡಿಎಚ್‌ಒ ಡಾ.ಅನಿಲ್ ಮಾತನಾಡಿ, ವೈದ್ಯರು ಸರಿಯಾದ ಸಮಯಕ್ಕೆ ಹಾಜರಾಗಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಸಿಬ್ಬಂದಿ ಅಶಿಸ್ತು ಕಂಡುಬಂದರೆ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಚೇತನ್, ಟಿಎಚ್‌ಒ ಡಾ.ವಿಜಯ್, ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಮಹೇಂದ್ರ ಇತರರು ಇದ್ದರು.