ಜಿಲ್ಲೆ

ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ: ಗುಣಮಟ್ಟ ಕಾಯ್ದುಕೊಳ್ಳಲು ಸೂಚನೆ

ಮಂಡ್ಯ: ನಗರದ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ರವಿಕುಮಾರ್ ಗಣಿಗ ಪರಿಶೀಲನೆ ನಡೆಸಿದರು.

ಸುಮಾರು 700 ಮೀಟರ್ ದೂರವಿರುವ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ರಸ್ತೆಯನ್ನು ಮೂರು ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಹೊಸದಾಗಿ ರಸ್ತೆ, ವಿದ್ಯುತ್ ದೀಪ ಅಳವಡಿಕೆ, ಪುಟ್‌ಪಾತ್ ನಿರ್ಮಾಣ, ರಸ್ತೆಯ ಒಂದು ಭಾಗದಲ್ಲಿ ಗಿಡ ನೆಟ್ಟು ಪೋಷಣೆ ಮಾಡುವ ಯೋಜನೆ ಇದಾಗಿದೆ. ಈ ಹಿನ್ನೆಲೆಯಲ್ಲಿ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ರವಿಕುಮಾರ್, ಕೆಲಸದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸುವಂತೆ ಸೂಚನೆ ನೀಡಿದರು.

ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್ ಇತರರಿದ್ದರು.

ಮೈದಾನ ವೀಕ್ಷಣೆ: ನಗರದ ಸರ್‌ಎಂವಿ ಜಿಲ್ಲಾ ಕ್ರೀಡಾಂಗಣದಲ್ಲಿ ಜು.10ರಿಂದ 13ರವರೆಗೆ ರಾಜ್ಯಮಟ್ಟದ ಹೊನಲು ಬೆಳಕಿನ ಪುರುಷರ ಹಾಗೂ ಮಹಿಳೆಯರ ಬ್ಯಾಸ್ಕೆಟ್‌ಬಾಲ್ ಪಂದ್ಯಾವಳಿ ನಡೆಯುವ ಹಿನ್ನೆಲೆಯಲ್ಲಿ ಶಾಸಕ ರವಿಕುಮಾರ್ ಗಣಿಗ ವೀಕ್ಷಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ಜಿಲ್ಲಾ ಬ್ಯಾಸ್ಕೆಟ್‌ಬಾಲ್ ಅಸೋಸಿಯೇಷನ್‌ನಿಂದ ನಾಲ್ಕು ದಿನದ ಟೂರ್ನಿ ಆಯೋಜಿಸಲಾಗಿದೆ. ರಾಜ್ಯದ ವಿವಿಧೆಡೆಯಿಂದ ಖ್ಯಾತ ಆಟಗಾರರು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ ಎಂದರು.