ಜಿಲ್ಲೆ

ನೀರು, ಮೇವಿಗೆ ಸಮಸ್ಯೆಯಾಗದಂತೆ ಎಚ್ಚರವಹಿಸಿ: ಶಾಸಕ ರವಿಕುಮಾರ್ ಗಣಿಗ ಸೂಚನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಮಳೆ ಅಭಾವದಿಂದ ಈಗಾಗಲೇ ಜಿಲ್ಲೆಯಲ್ಲಿ ಬರ ಆವರಿಸಿದೆ. ಮುಂಬರುವ ದಿನಗಳಲ್ಲಿ ಬೇಸಿಗೆ ಎದುರಾಗುವುದರಿಂದ ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ನೀರು ಹಾಗೂ ಮೇವಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಅಧಿಕಾರಿಗಳಿಗೆ ಶಾಸಕ ರವಿಕುಮಾರ್ ಗಣಿಗ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ ಡಿಸೆಂಬರ್ 2023 ರ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಅವಶ್ಯಕ ನೀರು ಸೌಲಭ್ಯ ಕಾರ್ಯ ಕೈಗೆತ್ತಿಕೊಳ್ಳಬೇಕು. ಕುಡಿಯುವ ನೀರಿಗೆ ತೊಂದರೆ ಇರುವ ಗ್ರಾಮಕ್ಕೆ ಟ್ಯಾಂಕರ್‌ಗಳನ್ನು ಒದಗಿಸಬೇಕು. ಒಟ್ಟಾರೆ ಕ್ಷೇತ್ರದ ಯಾವುದೇ ಗ್ರಾಮದಲ್ಲಿ ಸಮಸ್ಯೆ ಕಂಡುಬಾರದ ರೀತಿ ಅಧಿಕಾರಿಗಳು ಕೆಲಸ ನಿರ್ವಹಿಸಿ ಎಂದು ನಿರ್ದೇಶನ ನೀಡಿದರು.

ಜಾನುವಾರುಗಳು ಆಕಸ್ಮಿಕವಾಗಿ ಅಥವಾ ರೋಗಗಳಿಂದ ಮೃತಪಟ್ಟರೆ ಸರ್ಕಾರದಿಂದ ನೀಡುವ ಪರಿಹಾರವನ್ನು ತಲುಪಿಸಿ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸವಾಗಲಿ. ಗ್ರಾಮಗಳ ಡೇರಿ ಹಾಗೂ ಪಂಚಾಯಿತಿ ವ್ಯಾಪ್ತಿಯಲ್ಲಿ ಬ್ಯಾನರ್ ಅಳವಡಿಸಿ ಜಾಗೃತಿ ಮೂಡಿಸಬೇಕು. ಮಂಡ್ಯ ತಾಲೂಕು ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿ ಪೂರ್ಣಗೊಳಿಸಿ. ಆರೋಗ್ಯ ಇಲಾಖೆಯಿಂದ ಕೋವಿಡ್ ಬಗ್ಗೆ ಜಾಗೃತಿ, ಗರ್ಭಿಣಿಯರಿಗೆ ಕಿಟ್ ವಿತರಣೆ, ಮಕ್ಕಳಿಗೆ ಚುಚ್ಚುಮದ್ದು ಸೇರಿದಂತೆ ಆರೋಗ್ಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಎಂದು ಹೇಳಿದರು.

ಕಳೆದ ಬಾರಿ ಜಿಲ್ಲೆಯು ಎಸ್‌ಎಸ್‌ಎಲ್ಸಿ ಫಲಿತಾಂಶ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದು, ಜಿಲ್ಲೆಯಲ್ಲಿ ಮಂಡ್ಯ ತಾಲೂಕು ಪ್ರಥಮ ಸ್ಥಾನದಲ್ಲಿದೆ. ಈ ಬಾರಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಬರುವ ನಿಟ್ಟಿನಲ್ಲಿ ಮಕ್ಕಳನ್ನು ಸಿದ್ಧಗೊಳಿಸಿ. ಮಕ್ಕಳಿಗೆ ಪರೀಕ್ಷಾ ಭಯ ಹೋಗಲಾಡಿಸುವುದು ಸೇರಿದಂತೆ ವ್ಯಕ್ತಿತ್ವ ವಿಕಸನದ ತರಬೇತಿ ನೀಡಿರಿ. ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡಿ. ಜತೆಗೆ ಕೃಷಿ ಹೊಂಡ, ಎರೆಹುಳು ತೊಟ್ಟಿ ಯೋಜನೆ ಸೇರಿದಂತೆ ನರೇಗಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ. ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಹಾಸ್ಟೆಲ್ಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಿ. ಮಕ್ಕಳಿಗೆ ಪೌಷ್ಟಿಕ ಅಹಾರ ನೀಡುವುದರ ಜತೆಗೆ ಅಧಿಕಾರಿಗಳು ಹಾಸ್ಟೆಲ್ ದಿಢೀರ್ ಭೇಟಿ ನೀಡಿ ಕುಂದು ಕೊರತೆ ಆಲಿಸಿ ಎಂದು ಸೂಚನೆ ನೀಡಿದರು.

ಸಭೆಯಲ್ಲಿ ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದರ್, ತಾಲೂಕು ಪಂಚಾಯಿತಿ ಇಒ ವೀಣಾ ಇತರರಿದ್ದರು.