ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಹನೂರಿನಲ್ಲಿ ಶಾಸಕ ಎಂ.ಆರ್.ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು. ಹರೀಶ್, ವಿಶ್ವೇಶ್ವರ್ ಪ್ರಸಾದ್, ಬೋಸ್ಕೋ, ಪ್ರಸಾದ್, ಸವಿತಾ ಮತ್ತಿತರರಿದ್ದರು. 
ಜಿಲ್ಲೆ

ಹಂತ ಹಂತವಾಗಿ ಕ್ಷೇತ್ರ ಅಭಿವೃದ್ಧಿ

ನಾಗೇಶ ಎಸ್

ಹನೂರು: ರೈತರ ಸಮಸ್ಯೆಗಳನ್ನು ಬಗೆಹರಿಸುವುದರ ಜತೆಗೆ ಹಂತ ಹಂತವಾಗಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು. ಇದಕ್ಕೆ ಕಾಲಾವಕಾಶ ಹಾಗೂ ತಮ್ಮೆಲ್ಲರ ಸಹಕಾರ ಅಗತ್ಯವಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ವಸತಿ ಗೃಹದ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಹಾಗೂ ರೈತ ಮುಖಂಡರ ಸಭೆಯಲ್ಲಿ ಮಾತನಾಡಿದರು. ನದಿ ಮೂಲದಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಕ್ಷೇತ್ರ ವ್ಯಾಪ್ತಿಯ ಹುಬ್ಬೆಹುಣಸೆ ಹಾಗೂ ರಾಮನಗುಡ್ಡೆ ಡ್ಯಾಂಗೆ ನೀರು ತುಂಬಿಸಲಾಗುವುದು. ಪೈಪ್‌ಲೈನ್ ಕಾಮಗಾರಿಯಲ್ಲಿ ಕೆಲವು ಬದಲಾವಣೆ ಅಗತ್ಯವಾದ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡಿದ್ದು, ಈ ಸಂಬಂಧ ಈಗಾಗಲೇ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.

ಕೆಲವು ಡ್ಯಾಂಗಳಿಗೆ ನೀರು ತುಂಬಿಸುವುದರ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲು ಚಿಂತನೆ ನಡೆಸಲಾಗಿದೆ. ಇನ್ನು ರಾಮಾಪುರ- ನಾಲ್‌ರೋಡ್ ಮಾರ್ಗದ ರಸ್ತೆ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಹಂತದಲ್ಲಿದೆ. ಜತೆಗೆ ಕ್ಷೇತ್ರದಲ್ಲಿ ಹದಗೆಟ್ಟಿರುವ ರಸ್ತೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಅಭಿವೃದ್ಧಿಗೆ ಅಗತ್ಯ ಕ್ರಮವಹಿಸಲಾಗಿದೆ. ವಿದ್ಯುತ್ ಸಮಸ್ಯೆ ಬಗೆಹರಿಸಲು ಸೋಲಾರ್ ಘಟಗಳನ್ನು ಸ್ಥಾಪಿಸುವುದರ ಮೂಲಕ ದೀರ್ಘಕಾಲಿಕ ಯೋಜನೆ ರೂಪಿಸಲಾಗಿದ್ದು, ಈಗಾಗಲೇ ಸ್ಥಳವನ್ನು ಗುರ್ತಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕಾಡು ಪ್ರಾಣಿಗಳು ಜಮೀನುಗಳಿಗೆ ಲಗ್ಗೆ ಇಡದಂತೆ ಮಂಜಾಗ್ರತಾ ಕ್ರಮ ವಹಿಸಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪಶು ಆಸ್ಪತ್ರೆಗಳಲ್ಲಿ ಖಾಲಿಯಿರುವ ವೈದ್ಯ, ಸಿಬ್ಬಂದಿ ನೇಮಕ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರೊಂದಿಗೆ ಚರ್ಚಿಸಲಾಗಿದ್ದು, ಅಗತ್ಯ ಭರವಸೆ ನೀಡಿದ್ದಾರೆ. ಈ ಮೂಲಕ ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುತ್ತಿದೆ. ಇದರ ಜತೆಗೆ ಕ್ಷೇತ್ರವು ಹೆಚ್ಚು ವಿಸ್ತಾರ ಹೊಂದಿದ್ದು, ಕಾಡಂಚಿನ ಗ್ರಾಮಗಳಿಗೆ ಮೂಲ ಸೌಕರ್ಯ ಒದಗಿಸುವುದು ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ಆಗಬೇಕಿದ್ದು, ಈ ಸಂಬಂಧ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದೇ ನನ್ನ ಮುಖ್ಯ ಉದ್ದೇಶ. ಈ ಬಗ್ಗೆ ಮನದಟ್ಟು ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.

ಸಂಘದ ಅಧ್ಯಕ್ಷ ಹರೀಶ್, ಕಾರ್ಯಾಧ್ಯಕ್ಷ ಮಂಗಲ ವಿಶ್ವೇಶ್ವರ್ ಪ್ರಸಾದ್, ಕಾರ್ಯದರ್ಶಿ ಬೋಸ್ಕೋ, ಮುಖಂಡರಾದ ಪ್ರಸಾದ್, ಮಹೇಶ್, ಶ್ರೀನಿವಾಸ್, ಸವಿತಾ, ಪಾಪಬಾಯಿ, ಸಿದ್ದಿಬಾಯಿ ಇನ್ನಿತರರು ಇದ್ದರು.