ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಬಗರ್ ಹುಕುಂ ಸಮಿತಿಯ ಸಭೆ ನಡೆಯಿತು. ರಮೇಶ್ ಬಾಬು, ಮಹದೇವಪ್ಪ, ಕಲಾವತಿ, ನಾಗರಾಜು ಇದ್ದರು. 
ಜಿಲ್ಲೆ

ಸರ್ಕಾರಿ ಭೂಮಿ ಉಳುಮೆ ಮಾಡುತ್ತಿರುವವರಿಗೆ ಶೀಘ್ರ ಹಕ್ಕುಪತ್ರ

ನಾಗೇಶ ಎಸ್

ಗುಂಡ್ಲುಪೇಟೆ: ಸರ್ಕಾರಿ ಭೂಮಿ ಉಳುಮೆ ಮಾಡುತ್ತಿದ್ದ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಸದ್ಯದಲ್ಲಿಯೇ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕಂದಾಯ ಇಲಾಖೆ ಆಯೋಜಿಸಿದ್ದ ಬಗರ್ ಹುಕುಂ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ಹಲವಾರು ವರ್ಷಗಳಿಂದ ಸರ್ಕಾರಿ ಭೂಮಿಯನ್ನು ಉಳುಮೆ ಮಾಡುತ್ತಿರುವ ಒಂದೂವರೆ ಸಾವಿರಕ್ಕೂ ಹೆಚ್ಚಿನ ರೈತರು ಹಕ್ಕುಪತ್ರ ಪಡೆಯಲು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಕಂದಾಯ ಇಲಾಖೆ ಹಾಗೂ ಭೂಮಾಪನಾ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಜಂಟಿ ಸರ್ವೇ ನಡೆಸಿ ಅರ್ಹ ಫಲಾನುಭವಿಗಳನ್ನು ಗುರ್ತಿಸಿದ್ದಾರೆ. ಸದ್ಯದಲ್ಲಿಯೇ ಪಹಣಿ, ದುರಸ್ತಿ ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ಆನ್‌ಲೈನ್‌ನಲ್ಲಿಯೇ ಪೂರ್ಣಗೊಳಿಸಿ ಹಕ್ಕುಪತ್ರ ವಿತರಣೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಸಮಿತಿಯು ಸಭೆ ನಡೆಸಿ ಮತ್ತಷ್ಟು ಫಲಾನುಭವಿಗಳನ್ನು ಆಯ್ಕೆ ಮಾಡಲಿದೆ ಎಂದು ಹೇಳಿದರು.

ತಹಸೀಲ್ದಾರ್ ಟಿ.ರಮೆಶ್ ಬಾಬು ಆಯ್ಕೆಯಾದ 40 ಫಲಾನುಭವಿಗಳ ಪಟ್ಟಿ ಪ್ರಕಟಿಸಿದರು. ಈ ಸಂದರ್ಭದಲ್ಲಿ ಬಗರ್ ಹುಕುಂ ಸಮಿತಿ ಉಪಾಧ್ಯಕ್ಷ ಪಿ.ಮಹದೇವಪ್ಪ, ಸದಸ್ಯರಾದ ಕಲಾವತಿ, ನಾಗರಾಜು, ಜಿಪಂ ಮಾಜಿ ಸದಸ್ಯ ಮಹೇಶ್, ಗ್ರಾಮ ಪಂಚಾಯಿತಿ ಸದಸ್ಯ ಜಿ.ಕೆ.ಲೋಕೇಶ್ ಸೇರಿದಂತೆ ಹಲವರು ಇದ್ದರು.