ಜಿಲ್ಲೆ

ಪಾಲಿಟೆಕ್ನಿಕ್ ಕಾಲೇಜಿಗೆ ಶಾಸಕ ಸುನೀಲ್ ಭೇಟಿ

ಇಂದಿರಾ ಎನ್ ಕೆ

ಕಾರ್ಕಳ: ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಶಾಸಕ ವಿ.ಸುನೀಲ್‌ಕುಮಾರ್ ಸೋಮವಾರ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಪರಿಶೀಲಿಸಿ ಬಳಿಕ ತಹಸೀಲ್ದಾರ್ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ 3.97 ಕೋಟಿ ರೂ. ವೆಚ್ಚದ ಕಟ್ಟಡ ಕಾಮಗಾರಿ ವೀಕ್ಷಿಸಿದ ಶಾಸಕರು ಅಧಿಕಾರಿಗಳಿಗೆ ಸಲಹೆ ನೀಡಿದರು. ಬಳಿಕ ಕಾಲೇಜು ಕ್ಯಾಂಪಸ್‌ನೊಳಗೆ ಪ್ರಕೃತಿ ವಿಕೋಪದ ಮುಂಜಾಗ್ರತಾ ಕ್ರಮಗಳ ಕೈಗೊಳ್ಳುವಿಕೆ ಸಹಿತ ಹೈವೋಲ್ಟೇಜ್ ವಿದ್ಯುತ್ ಪರಿವರ್ತಕ ಹಾಗೂ ಜನರೇಟರ್ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾಲೇಜು ಕ್ಯಾಂಪಸ್‌ನಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶೌಚಗೃಹ ಕಾಮಗಾರಿ ವೀಕ್ಷಿಸಿದ ಶಾಸಕರು ಬಳಿಕ ಕರ್ನಾಟಕ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್ (ಕೆಜಿಟಿಟಿಐ) ಕಾರ್ಯಚಟುವಟಿಕೆಗಳ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು. ತಹಸೀಲ್ದಾರ್ ಪ್ರದೀಪ್ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.