ಮದ್ದೂರು: ಶಾಸಕ ಕೆ.ಎಂ.ಉದಯ್ ಪಟ್ಟಣದಲ್ಲಿ ಕಾಂಗ್ರೆಸ್ ಭವನ ನಿರ್ಮಿಸಲು ತಮ್ಮದೇ ಜಾಗವನ್ನೇ ಪಕ್ಷಕ್ಕೆ ದಾನ ನೀಡಿದ್ದಾರೆ. ಅದಕ್ಕಾಗಿ ಅವರನ್ನು ಪಕ್ಷದ ಪರವಾಗಿ ಅಭಿನಂದಿಸುತ್ತೇನೆ ಎಂದು ಮಾಜಿ ಸಂಸದ, ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದರು.
ಪಟ್ಟಣದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಕಾಂಗ್ರೆಸ್ ಭವನ ನಿರ್ಮಾಣದಿಂದ ಪಕ್ಷ ಸಂಘಟನೆಗೆ ಸಹಕಾರಿಯಾಗಲಿದ್ದು, ಕಾಂಗ್ರೆಸ್ ಕಾರ್ಯಕರ್ತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಲ್ಲಿ ಪಕ್ಷದ ಕಚೇರಿ ನಿರ್ಮಿಸಲು ಸೂಚಿಸಿದ್ದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈಗಾಗಲೇ 7 ಶಾಸಕರು ಕಾಂಗ್ರೆಸ್ ಭವನವನ್ನು ನಿರ್ಮಿಸುತ್ತಿದ್ದು, ಮುಂದೆ ಕನಿಷ್ಠ 100 ಕಾಂಗ್ರೆಸ್ ಭವನವನ್ನು ನಿರ್ಮಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ ಎಂದರು.
ಭವನ ನಿರ್ಮಾಣಕ್ಕೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ಕೈಲಾದ ದೇಣಿಗೆ ನೀಡುವ ಮೂಲಕ ಭವನದ ನಿರ್ಮಾಣಕ್ಕೆ ಸಹಕರಿಸಬೇಕೆಂದರು. ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು ಭವನದ ನಿರ್ಮಾಣಕ್ಕೆ 25 ಲಕ್ಷ ರೂ. ದೇಣಿಗೆಯನ್ನು ನೀಡುವುದಾಗಿ ಘೋಷಿಸಿದರು.
ಶಾಸಕ ಕೆ.ಎಂ.ಉದಯ್ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ಮದ್ದೂರಿನಲ್ಲಿ ಸರ್ಧಿಸಲು ಟಿಕೆಟ್ ಸಿಗಲು ಡಿ.ಕೆ.ಸುರೇಶ್ ಅವರೇ ಕಾರಣ. ನನ್ನ ಸಮಾಜ ಸೇವೆಯಾಗಲಿ, ಅಭಿವೃದ್ಧಿ ಕೆಲಸಗಳನ್ನು ಮಾಡಲು ಅವರೇ ಸ್ಫೂರ್ತಿ ಎಂದ ಅವರು ಮುಂದೆ ಕಾಂಗ್ರೆಸ್ ಭವನ ಕಾರ್ಯಕರ್ತರ ಶಕ್ತಿಯಾಗಲಿದೆ ಎಂದರು.
ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಸಮಾಜ ಸೇವಕಿ ವಿನುತಾ ಕೆ.ಎಂ.ಉದಯ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ತಾಲೂಕು ಅಧ್ಯಕ್ಷ ಚೆಲುವರಾಜು, ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀವ್, ಪುರಸಭಾಧ್ಯಕ್ಷೆ ಕೋಕಿಲಾ ಅರುಣ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಬಸವರಾಜು, ಮನ್‌ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಮುಖಂಡರಾದ ಚಿದಂಬರ್, ಅಜ್ಜಹಳ್ಳಿ ರಾಮಕೃಷ್ಣ ಇತರರು ಇದ್ದರು.
ಮೇಕೆದಾಟು ಯೋಜನೆಗೆ ಎಚ್.ಡಿ.ಕುಮಾರಸ್ವಾಮಿ ಮೌನ ಏಕೆ
ಸಂಸದನಾಗಿ ಆಯ್ಕೆಯಾದ 5 ನಿಮಿಷದಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹೇಳಿದ್ದರು. ಆದರೆ ಇನ್ನೂ ಆ ಬಗ್ಗೆ ಏಕೆ ಮೌನವಹಿಸಿದ್ದಾರೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಪ್ರಶ್ನಿಸಿದರು.
ಈಗಲಾದರೂ ಮೇಕೆದಾಟು ಯೋಜನೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಅನುಮತಿ ಕೊಡಿಸಬೇಕು ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಮುಂದಿನ ದಿನಗಳಲ್ಲಿ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಲು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸಿದ್ಧವಿದೆ ಎಂದ ಅವರು ಜಿಲ್ಲೆ ಸೇರಿದಂತೆ ತಾಲೂಕಿನ ಕೆರೆಗಳನ್ನು ತುಂಬಿಸಲು ಪಕ್ಷದ ಶಾಸಕರು ಇನ್ನೂ ಹೆಚ್ಚು ಆಸಕ್ತಿವಹಿಸುತ್ತಾರೆ ಎಂದರು.