ಜಿಲ್ಲೆ

ಡೆಂಗ್ಯೂ ನಿಯಂತ್ರಣಕ್ಕೆ ಆದ್ಯತೆ ನೀಡಲು ಸೂಚನೆ

ಗೋಪಾಲಕೃಷ್ಣ ಪಾದೂರ್

ಉಡುಪಿ: ನಗರಸಭಾ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಚ್ಛತೆ ಹಾಗೂ ತ್ಯಾಜ್ಯ ವಿಲೇವಾರಿ ಬಗ್ಗೆ ವಿಶೇಷ ಕ್ರಮ ವಹಿಸಿ ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಆದ್ಯತೆ ನೀಡುವಂತೆ ಶಾಸಕ ಯಶ್​ಪಾಲ್​ ಸುವರ್ಣ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬುಧವಾರ ನಗರಸಭೆ ಕಚೇರಿಯಲ್ಲಿ ತುರ್ತು ಸಭೆ ನಡೆಸಿದ ಅವರು, ನಗರದಲ್ಲಿ ಕಟ್ಟಡ ಕಾಮಗಾರಿ ಪ್ರದೇಶದಲ್ಲಿ ಸ್ವಚ್ಚತೆ ಕಾಪಾಡುವ ಬಗ್ಗೆ ಗುತ್ತಿಗೆ ಸಂಸ್ಥೆಗಳಿಗೆ ಸೂಚನೆ ನೀಡಿ ಪರಿಶೀಲನೆ ನಡೆಸುವಂತೆ ತಿಳಿಸಿದರು. ರಸ್ತೆ ಬದಿ ಗೂಡಂಗಡಿಗಳ ತ್ಯಾಜ್ಯ ವಸ್ತುಗಳ ಸೂಕ್ತ ವಿಲೇವಾರಿ ಮಾಡಿ ಸೊಳ್ಳೆ ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು. ಈ ಬಗ್ಗೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಬೇಕು. ನಿರಂತರ ಫಾಗಿಂಗ್​ ಪ್ರಕ್ರಿಯೆ ನಡೆಸಬೇಕು ಎಂದು ಹೇಳಿದರು.

ನಗರಸಭಾ ವ್ಯಾಪ್ತಿಯ ಪ್ರಮುಖ ರಸ್ತೆಗಳ ಗುಂಡಿ ಮುಚ್ಚುವ ಕೆಲಸವಾಗಬೇಕು. ಗಣೇಶ ಚತುರ್ಥಿ ಮೆರವಣಿಗೆ ಸಾಗುವ ರಸ್ತೆಗಳ ಕಾಮಗಾರಿಗಳನ್ನು ತುರ್ತಾಗಿ ನಡೆಸಬೇಕು ಎಂದು ಹೇಳಿದರು. ಸಭೆಯಲ್ಲಿ ಪೌರಾಯುಕ್ತ ರಾಯಪ್ಪ, ನಗರಸಭಾ ಸದಸ್ಯರಾದ ಪ್ರಭಾಕರ ಪೂಜಾರಿ, ಗಿರೀಶ್​ ಅಂಚನ್​, ಗಿರಿಧರ್​ ಆಚಾರ್ಯ, ಕಲ್ಪನಾ ಸುಧಾಮ, ಗೀತಾ ಡಿ. ಶೇಟ್​ ಉಪಸ್ಥಿತರಿದ್ದರು.