ಜಿಲ್ಲೆ

ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆ - 53 ಸೂಕ್ಷ್ಮ ಮತಗಟ್ಟೆಗಳು

Mangaluru - Hariprasad Rai


ಮಂಗಳೂರು : ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪ ಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್‌ಎಂ.ಪಿ .ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಚುನಾವಣೆಯ ಸಿದ್ದತೆ ಬಗ್ಗೆ ಮಾಹಿತಿ ನೀಡಿದ ಅವರು ‘ ಸೂಕ್ಷ್ಮ ಮತಗಟ್ಟೆಗಳಲ್ಲಿ ಸಂಪೂರ್ಣ ವೀಡಿಯೊ ಚಿತ್ರೀಕರಣ ವ್ಯವಸ್ಥೆ ಮಾಡಲಾಗಿದೆ .ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 20ಕ್ಕಿಂತ ಹೆಚ್ಚು ಮತದಾರರು ಇರುವ ಮತಗಟ್ಟೆಗಳಲ್ಲಿ ಮೈಕ್ರೋ ವೀಕ್ಷಕರುಗಳನ್ನು ನೇಮಕ ಮಾಡಲಾಗಿ ಎಂದರು.
ಆಯಾ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಸಿಸಿಟಿವಿಗಳನ್ನು ಚುನಾವಣಾ ಪ್ರಕ್ರಿಯೆಗೆ ಬಳಸಲಾಗುತ್ತಿದೆ .ಮತ ಚಲಾಯಿಸುವ ಉದ್ದೇಶಕ್ಕಾಗಿ ಮತಗಟ್ಟೆ ಅಧಿಕಾರಿ ಮತಪತ್ರದೊಡನೆ ನೀಡುವ ನೇರಳೆ ಬಣ್ಣದ ಪೆನ್ನು ಮಾತ್ರ ಬಳಸಿ ಮತ ಚಲಾಯಿಸಲು ಅವಕಾಶವಿರುತ್ತದೆ. ಬೇರೆ ಯಾವುದೇ ಪೆನ್ನು ಅಥವಾ ಗುರುತು ಮಾಡುವ ಸಾಧನವನ್ನು ಬಳಸಿ ಮತ ಚಲಾಯಿಸಿದರೆ ಅಂತಹ ಮತಪತ್ರವನ್ನು ಅಸಿಂಧು ಪರಿಗಣಿಸಲಾಗುವುದು. ಮತ ಚಲಾಯಿಸುವ ವಿಧಾನದ ಬಗ್ಗೆ ಎಲ್ಲ ಮತದಾರರಿಗೆ ಮಾಹಿತಿ ನೀಡಲಾಗಿದೆ ಮೊಬೈಲ್ ಫೋನು ತೆಗೆದುಕೊಂಡು ಹೋಗಲು ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಯ 392 ಮತಗಟ್ಟೆಗಳಿಗೆ ತಲಾ 470 ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮೈಕ್ರೋ ವೀಕ್ಷಕರನ್ನು ನೇಮಿಸಲಾಗಿದೆ. ಮತಗಟ್ಟೆಗಳ ಭದ್ರತೆಯ ಬಗ್ಗೆ ಜಿಲ್ಲೆಯ ಪೊಲೀಸ್ ಅಧೀಕ್ಷಕರ ವ್ಯಾಪ್ತಿ ಮತ್ತು ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಒಟ್ಟು 540 ಪೊಲೀಸ್ ಅಧಿಕಾರಿ/ ಸಿಬ್ಬಂದಿಗಳನ್ನು ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 328 ಪೊಲೀಸ್ ಅಧಿಕಾರಿ / ಸಿಬ್ಬಂದಿ ನಿಯೋಜಿಸಲಾಗಿದೆ. ಮತಗಟ್ಟೆ ಕೇಂದ್ರದ 100 ಮೀ.ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೆ ವ್ಯಾಪಾರ ವಹಿವಾಟು, ಜನಸಂದಣಿ ಆಗದಂತೆ ಸೂಚಿಸಲಾಗಿದೆ .ಈ ಬಗ್ಗೆ ಮತಗಟ್ಟೆಗಳು ಇರುವ ಪ್ರದೇಶ ವ್ಯಾಪ್ತಿಗೆ ಸಂಬಂಧಿಸಿದಂತೆ ಕಲಂ 163 ರಂತೆ ನಿಷೇಧಾಜ್ಞೆಯನ್ನು ಕೂಡ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿಪ್ರಕಟಣೆಯಲ್ಲಿ ತಿಳಿಸಿದ್ದಾರೆ.