ಹನೂರು: ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರದಿಂದ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ನೀಡಬೇಕು ಎಂದು ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ ರಘು ಸೂಚಿಸಿದರು.
ಮ.ಬೆಟ್ಟದ ನಾಗಮಲೆ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಾಧಿಕಾರದಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು. ಬೆಟ್ಟಕ್ಕೆ ಬರುವ ಭಕ್ತರಿಗೆ ಮೂಲಸೌಕರ್ಯ ಒದಗಿಸುವುದು ಪ್ರಾಧಿಕಾರದ ಕರ್ತವ್ಯ. ಈ ದೆಸೆಯಲ್ಲಿ ದೀಪದಗಿರಿ ಒಡ್ಡುವಿನಲ್ಲಿ 108 ಕೋಟಿ ರೂ. ವೆಚ್ಚದಲ್ಲಿ ಈಗಾಗಲೇ ಶ್ರೀ ಮಹದೇಶ್ವರರ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಆದರೆ, ತಳಭಾಗದಲ್ಲಿನ ಗುಹೆಯಲ್ಲಿ ಮ್ಯೂಸಿಯಂ ಹಾಗೂ ಸಿಸಿ ರಸ್ತೆ ಕಾಮಗಾರಿಯು ವಿಳಂಬ ಗತಿಗೆ ತೀವ್ರ ಆಕ್ಷೇಪವ್ಯಕ್ತವಾಗಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಮುತುವರ್ಜಿ ವಹಿಸಿ ಕಾಮಗಾರಿ ಪೂರ್ಣಗೊಳಿಸಬೇಕು. ಹಾಗೆಯೇ, ದೊಡ್ಡಕೆರೆ ಅಭಿವೃದ್ಧಿ, ಭಕ್ತರ ವಸತಿ ಕಟ್ಟಡ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಗುತ್ತಿಗೆದಾರರಿಗೆ ನೋಟಿಸ್ ನೀಡುವುದರ ಜತೆಗೆ ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.