ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಅಂಗವಾಗಿ ಬುಧವಾರ ಜಿಲ್ಲೆಯ ವಿವಿಧೆಡೆ ಬಿಜೆಪಿಯಿಂದ ಹಲವು ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಆರೋಗ್ಯ, ರಕ್ತದಾನ ಶಿಬಿರ, ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಮೋದಿ ಅವರ ದೀರ್ಘ ಆಯುಷ್ಯಕ್ಕೆ ಪ್ರಾರ್ಥಿಸಿ ವಿವಿಧ ದೇವಸ್ಥಾನಗಳಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪೂಜೆ ಸಲ್ಲಿಸಿದರು.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಶಾಸಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ನಗರಾಧ್ಯಕ್ಷ ಡಿ.ಮೋಹನ್ ರೆಡ್ಡಿ ಸೇರಿ ಅನೇಕರು ಮೋದಿ ಜನ್ಮ ದಿನಾಚರಣೆಯ ವಿವಿಧ ಕಾರ್ಯಕ್ರಮಗಳನ್ನು ಭಾಗಿಯಾದರು.
ತುಂಗಾನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಸ್ವಸ್ಥ ನಾರಿ- ಸಶಕ್ತ ಪರಿವಾರ ಅಭಿಯಾನಕ್ಕೆ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಅಭಿಯಾನದ ಮೂಲಕ ಮಹಿಳೆಯರ ಆರೋಗ್ಯ ತಪಾಸಣೆ ನಡೆಸಲಾಗುವುದು. ನುರಿತ ವೈದ್ಯರು ಪರೀಕ್ಷೆ ನಡೆಸಿ ಸೂಕ್ತ ಸಲಹೆ ಹಾಗೂ ಚಿಕಿತ್ಸೆ ನೀಡಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುತುಪಡಿಸಿದ ಸ್ಥಳಗಳಲ್ಲಿ ಮಹಿಳೆಯರಿಗಾಗಿ ಆರೋಗ್ಯ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗುವುದು ಎಂದರು.
ಮಹಿಳೆಯರಿಗೆ ಮಾನಸಿಕ ಆರೋಗ್ಯ ಸೇವೆ ಒದಗಿಸುವುದು, ಗರ್ಭಿಣಿಯರಿಗೆ ಸೂಕ್ತ ಸಲಹೆ ನೀಡುವುದು, ಮಕ್ಕಳ ಹಾಗೂ ಹಿರಿಯ ನಾಗರಿಕರ ಆರೋಗ್ಯ ಕಾಪಾಡುವುದು ಯೋಜನೆಯ ಮುಖ್ಯ ಅಂಶಗಳಾಗಿವೆ. ಕುಟುಂಬದ ಸಂಪೂರ್ಣ ಹೊಣೆಗಾರಿಕೆ ನೋಡಿಕೊಳ್ಳುವ ಮಹಿಳೆಯರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.
ಡಿಎಚ್‌ಒ ಡಾ. ನಟರಾಜ್, ಜಿಲ್ಲಾ ಸರ್ಜನ್ ಡಾ. ಸಿದ್ದನಗೌಡ ಪಾಟೀಲ್, ಆರೋಗ್ಯ ಇಲಾಖೆ ಅಧಿಕಾರಿ ಡಾ. ನಾಗರಾಜ ನಾಯ್ಕ, ಎನ್.ಕೆ.ಜಗದೀಶ್, ಡಿ.ಮೋಹನ್ ರೆಡ್ಡಿ ಇದ್ದರು.