ಜಿಲ್ಲೆ

ಅಕ್ಕಿ ಬದಲು ಹಣ ಫಲಾನುಭವಿ ಖಾತೆಗೆ

ಹೊಸದುರ್ಗ: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ 5 ಕೆ.ಜಿ ಅಕ್ಕಿ ಬದಲು ಮೊತ್ತವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಜಿಲ್ಲೆಯಲ್ಲೂ ಸಮರ್ಪಕ ಅನುಷ್ಠಾನಕ್ಕೆ ಮುಂದಾಗಿ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಅನ್ನಭಾಗ್ಯ ಯೋಜನೆ ಅನುಷ್ಠಾನ ಕುರಿತು ಆಹಾರ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಯೋಜನೆಯಡಿ ರಾಜ್ಯದಲ್ಲಿ 3.61 ಕೋಟಿ ಫಲಾನುಭವಿಗಳಿಗೆ 598.62 ಕೋಟಿ ರೂ. ಮೊತ್ತ ಡಿಬಿಟಿ ಮೂಲಕ ಜಮಾ ಮಾಡಲಾಗಿದೆ. ಜಿಲ್ಲೆಯಲ್ಲಿ 11.45 ಲಕ್ಷ ಫಲಾನುಭವಿಗಳಿಗೆ 19.47 ಕೋಟಿ ರೂ. ಪಾವತಿಸಲಾಗಿದೆ. ಯಾವುದೇ ಗೊಂದಲಗಳಿಗೆ ಅವಕಾಶವಾಗದಂತೆ ಅನುಷ್ಠಾನಗೊಳಿಸಬೇಕು ಎಂದು ತಾಕೀತು ಮಾಡಿದರು.

ಜಿಲ್ಲೆಯಲ್ಲಿ 3,37,084 ಫಲಾನುಭವಿಗಳಿಗೆ 5 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತಿದ್ದು, ಹೆಚ್ಚುವರಿ 5 ಕೆ.ಜಿ. ಅಕ್ಕಿ ಬದಲು 170 ರೂ. ಪ್ರತಿ ಫಲಾನುಭವಿ ಖಾತೆಗೆ ನೀಡಲಾಗುತ್ತಿದೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ 100 ದಿನದೊಳಗೆ 4 ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದು, ಯುವನಿಧಿ ಡಿಸೆಂಬರ್ ಅಂತ್ಯದೊಳಗೆ ಜಾರಿಯಾಗಲಿದೆ ಎಂದರು.

ಮಾಜಿ ಸಚಿವ ಎಚ್.ಆಂಜನೇಯ, ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಆಹಾರ ಇಲಾಖೆ ಜಂಟಿನಿರ್ದೇಶಕ ಮಧುಸೂಧನ್, ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಇತರರಿದ್ದರು.