ಜಿಲ್ಲೆ

ಕೆರೆಕಟ್ಟೆ ಅತಿಕ್ರಮಣವಾಗದಂತೆ ನಿಗಾವಹಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್ ಸೂಚನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಜಿಲ್ಲೆಯಲ್ಲಿ ಕೆರೆಕಟ್ಟೆಗಳನ್ನು ಯಾರೂ ಅತಿಕ್ರಮಣ ಮಾಡದಂತೆ ನಿಗಾವಹಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ. ಕೃಷ್ಣರಾಜಸಾಗರ ಅಣೆಕಟ್ಟಿನಲ್ಲಿ ಪ್ರಸ್ತುತ 106 ಅಡಿ ನೀರು ಸಂಗ್ರಹವಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 968 ಕೆರೆಗಳಿದ್ದು, ಅದರಲ್ಲಿ 232 ಕೆರೆಗಳು ಶೇ.100ರಷ್ಟು ಪ್ರಮಾಣದಲ್ಲಿ ನೀರು ಭರ್ತಿಯಾಗಿವೆ. 168 ಕೆರೆಗಳು ಶೇ.75 ಕ್ಕಿಂತ ಹೆಚ್ಚು ಪ್ರಮಾಣದಲ್ಲಿ ನೀರು ಶೇಖರಣೆಯಾಗಿದೆ. ಕೆರೆ ಕಟ್ಟೆಗಳಿಗೆ ನೀರು ಪೂರೈಕೆ ಆಗದಂತೆ ಯಾರಾದರೂ ಅಡ್ಡಗಟ್ಟಿದ್ದರೆ ಅಂತಹವರನ್ನು ಗುರುತಿಸಿ ಸೂಕ್ತ ಕ್ರಮ ಜರುಗಿಸಿ ಎಂದು ನಿರ್ದೇಶನ ನೀಡಿದರು.

ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಈಗಾಗಲೇ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಉದ್ಭವಿಸಬಹುದಾದ ಗ್ರಾಮಗಳನ್ನು ಗುರುತಿಸಲಾಗಿದೆ. ಅಂತಹ ಗ್ರಾಮಗಳಿಗೆ ನೀರು ಪೂರೈಕೆ ಮಾಡಲು 160 ಖಾಸಗಿ ಕೊಳವೆ ಬಾವಿಗಳನ್ನು ಖರೀದಿಸಲಾಗಿದೆ. ಇನ್ನೂ 124 ಗ್ರಾಮಗಳಲ್ಲಿ ಕೊಳವೆಬಾವಿಯನ್ನು ಕೊರೆಯಲು ಸೂಕ್ತ ಜಾಗ ಗುರುತಿಸಲಾಗಿದೆ. ಸಾಧ್ಯವಾದಷ್ಟು ಗಿಡ ಮರಗಳನ್ನು ಬೆಳೆಸಿದರೆ ಬೇಸಿಗೆ ಸಂದರ್ಭದಲ್ಲಿ ಅನುಕೂಲವಾಗುತ್ತದೆ. ಉತ್ತಮ ಪರಿಸರಕ್ಕೆ ಅಗತ್ಯವಿರುವ ಹಾಗೂ ವನ್ಯಜೀವಿಗಳಿಗೆ ಅನುಕೂಲವಾಗುವಂತಹ ಗಿಡ ಮರ ಬೆಳೆಸಿ, ಪ್ರಸ್ತುತ ಇರುವ ಗಿಡ ಮರಗಳನ್ನು ಉಳಿಸಿ ಇದು ಅತಿ ಮುಖ್ಯವಾದ ಕೆಲಸ ಎಂದು ಹೇಳಿದರು.

ಸರ್ಕಾರಿ ಬಸ್‌ಗಳು ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಪ್ರಯಾಣಿಸುತ್ತಿರುವುದು ಗಮನಕ್ಕೆ ಬಂದಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರಿ ಬಸ್‌ಗಳಿಗೆ ಟೋಲ್‌ಗಳಲ್ಲಿ ವಿನಾಯಿತಿ ಕಲ್ಪಿಸುವಂತೆ ಪ್ರಸ್ತಾವನೆ ಸಲ್ಲಿಸಿ. ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ತೋರದೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮವಹಿಸಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಎಂದರು.

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ. ಪ್ರತಿ ದಿನಕ್ಕೆ 1000 ಭೂ ದಾಖಲೆ ಹಾಳೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಲಾಗುತ್ತಿದೆ. ಈ ವರ್ಷ 53 ಲಕ್ಷ ಹಾಳೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಲಾಗಿದೆ. ರೈತ ಆತ್ಮಹತ್ಯೆ ಪ್ರಕರಣ ಪರಿಶೀಲಿಸಿ ಪರಿಹಾರ ಧನ ನೀಡಲಾಗಿದೆ. ಜಿಲ್ಲೆಯ ಎಲ್ಲ ಕೆರೆಗಳ ಸರ್ವೇ ನಡೆಸಿ ಕೆರೆಯ ಸುತ್ತಳತೆಯನ್ನು ಗುರುತಿಸಲಾಗಿದೆ. ಸಂಬಂಧಪಟ್ಟ ಇಲಾಖೆಯವರು ಯಾವುದೇ ಕಾರಣಕ್ಕೂ ಒತ್ತುವರಿ ಆಗದಂತೆ ನೋಡಿಕೊಳ್ಳಿ. ಸಾರ್ವಜನಿಕರ ಅನುಕೂಲಕ್ಕಾಗಿ ಹನಕೆರೆ ಮತ್ತು ಗೌಡಹಳ್ಳಿಯಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಕಾರಿ ಡಾ.ಕೆ.ಮೋಹನ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಕೃಷ್ಣಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಮೂರ್ತಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಕೆ.ಎನ್.ರೂಪಶ್ರೀ ಇತರರಿದ್ದರು.