ಜಿಲ್ಲೆ

ಕೇಂದ್ರದಿಂದ ದ.ಕ.ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು : ಸಂಸದ ಕ್ಯಾ. ಚೌಟ ಮಾಹಿತಿ

Mangaluru - Hariprasad Rai



ಮಂಗಳೂರು : ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ
ಕೇಂದ್ರ ಸರ್ಕಾರ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಕ್ಯಾನ್ಸರ್ ಡೇ ಕೇರ್ ಸೆಂಟರ್ ಸ್ಥಾಪನೆಗೆ ಅನುಮೋದನೆ ನೀಡಿದ್ದು,
1.49 ಕೋಟಿ ರೂ.ಅನುದಾನ ಮೀಸಲಿಡಲಾಗಿದೆ ಎಂದು ದ.ಕ.ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಕ್ಯಾನ್ಸರ್ ರೋಗಿಗಳ ಆರೈಕೆಗಾಗಿ ಕೇಂದ್ರ ಸರ್ಕಾರವು 2025-26ರ ಬಜೆಟ್‌ನಲ್ಲಿ ಮುಂದಿನ ಮೂರು ವರ್ಷಗಳಲ್ಲಿ ದೇಶದ
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಡೇ ಕೇರ್ ಸ್ಥಾಪಿಸುವ ಬಗ್ಗೆ ಘೋಷಣೆ ಮಾಡಿತ್ತು. ಪ್ರಥಮ ಹಂತದಲ್ಲಿ 200 ಕೇಂದ್ರಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ದ.ಕ.ಸೇರಿದಂತೆ ಕರ್ನಾಟಕದ 16 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಪ್ರಸ್ತಾವಿತ ಕೇಂದ್ರವು ವೆನ್ಲಾಕ್ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಕ್ಯಾನ್ಸರ್ ರೋಗ ನಿರ್ಣಯ, ಕೀಮೋಥೆರಪಿ, ಆರೈಕೆ, ಕ್ಯಾನ್ಸರ್‌ತಡೆಗಟ್ಟುವಿಕೆ -ಜಾಗೃತಿ ಕಾರ್ಯಕ್ರಮ ಮತ್ತು ಚಿಕಿತ್ಸಾ ಸೇವೆಗಳ ಜತೆಗೆ ಇತರ ಬೆಂಬಲ ಸೇವೆಗಳು ಒದಗಿಸಲಿದೆ. ಜನರಿಗೆ ಗುಣಮಟ್ಟದ ಕ್ಯಾನ್ಸರ್ ಆರೈಕೆಯನ್ನು ಒದಗಿಸುವುದು ಮತ್ತು ತೃತೀಯ ಹಂತದ ಆರೈಕೆ ಕೇಂದ್ರಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ.
ದ.ಕ.ಜಿಲ್ಲೆಗೆ ಡೇ ಕೇರ್ ಕ್ಯಾನ್ಸರ್ ಸೆಂಟರ್ ಸ್ಥಾಪನೆಗೆ ಅನುಮೋದನೆ ನೀಡಿರುವ ಪ್ರಧಾನಿ ಮೋದಿ ಮತ್ತು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದ ಸಲ್ಲಿಸಿರುವ ಕ್ಯಾ.ಚೌಟ ಮುಂದಿನ ದಿನಗಳಲ್ಲಿ ಈ ಸೆಂಟರ
ದ.ಕ. ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಕ್ಯಾನ್ಸರ್ ರೋಗಿಗಳಿಗೆ ಆಶಾಕಿರಣವಾಗಲಿದೆ ಎಂದು ತಿಳಿಸಿದ್ದಾರೆ.