ಜಿಲ್ಲೆ

MUDA Scam: ದಿಢೀರ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ

Webdesk - Savina Naik

ಬೆಂಗಳೂರು: ಮುಡಾ ಪ್ರಕರಣ (MUDA Scam) ಸಂಬಂಧ ಹೈಕೋರ್ಟ್​ ಇಂದು (ಸೆ.24) ಸ್ಫೋಟಕ ತೀರ್ಪು ನೀಡಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೊರ್ಟ್ ವಜಾಗೊಳಿಸಿದೆ. ಕೋರ್ಟ್​​ ಆದೇಶ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ನಾಳೆ ಬೆಳಗ್ಗೆ 10ಕ್ಕೆ ತುರ್ತು ಸಂಪುಟ ಸಭೆ ಕರೆಯಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.

ಬುಧವಾರ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.

ಮುಡಾ ಪ್ರಕರಣ (MUDA Scam) ಹಗರಣ ಸಂಬಂಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದ ರಾಜ್ಯಪಾಲ ಥಾವರ ಚಂದ್​ ಗೆಹ್ಲೋಟ್​ ಕ್ರಮವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ (Siddaramaiah) ಸಲ್ಲಿಸಿದ್ದ ಅರ್ಜಿಯನ್ನು ಹೈಕೊರ್ಟ್ (High Court)​ ವಜಾಗೊಳಿಸಿದೆ. ಈ ಆದೇಶದಿಂದ ತಲ್ಲಣಗೊಂಡಿರುವ ಸಿಎಂ ಸಿದ್ದರಾಮಯ್ಯ ಮುಂದಿನ ದಾರಿಯ ಬಗ್ಗೆ ಚಿಂತಿಸುತ್ತಿದ್ದಾರೆ.

ಏನಿದು ಮುಡಾ ಅಕ್ರಮ ಪ್ರಕರಣ: ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 50-50 ಅನುಪಾತದಲ್ಲಿ 14 ಮುಡಾ ಸೈಟ್‌ಗಳನ್ನು ಹಂಚಿಕೆ ಮಾಡಲಾಗಿದೆ ಅನ್ನೋ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಸಿಎಂ ಪತ್ನಿಗೆ 14 ನಿವೇಶನ ಮಂಜೂರಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ದಾಖಲೆಗಳ ಜೊತೆ ಆರೋಪಿಸಿರುವ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಅವರು, ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಬದಲಿ ನಿವೇಶನ ನೀಡಿ ಲಾಭ ಮಾಡಿಕೊಟ್ಟಿರುವುದು ನಿಜ. ಮೈಸೂರಿನ ಕೆಸರೆ ಸರ್ವೇ ನಂಬರ್ 464 ವ್ಯಾಪ್ತಿಯಲ್ಲಿ 3.16 ಗಂಟೆ ಜಾಮೀನು ಸ್ವಾಧೀನ ಮಾಡಿಕೊಂಡಿದ್ದಾರೆ. ಇದಕ್ಕೆ ಪರ್ಯಾಯವಾಗಿ ವಿಜಯನಗರದ ಬಡಾವಣೆಯಲ್ಲಿ 14 ನಿವೇಶನವನ್ನು ಸಿಎಂ ಪತ್ನಿಯ ಹೆಸರಿಗೆ ನೀಡಿದ್ದಾರೆ ಎಂದು ಆರೋಪಿಸಿದ್ದರು.

ದೇವನೂರು ಬಡಾವಣೆಯಲ್ಲಿ ಸಾವಿರಾರು ಸೈಟ್ ಇದ್ದರೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ?: ಇದು ಲಾಭದ ಉದ್ದೇಶ ಅಲ್ಲವೇ. ಈ ಹಿಂದಿನ ಮುಡಾ ಆಯುಕ್ತ ನಟೇಶ್ ಈ ಆದೇಶ ಮಾಡಿದ್ದು, ಸಿಎಂ ಪತ್ನಿ ಆರ್ಥಿಕ ಲಾಭವನ್ನು ಮಾಡಿಕೊಟ್ಟಿದ್ದಾರೆ. ಹೀಗಾಗಿ ಮುಡಾದ 50:50 ಹಗರಣದಲ್ಲಿ ಅವರು ಸಿಎಂ ಪತ್ನಿಯು ಭಾಗಿಯಾಗಿದ್ದಾರೆ ಎಂದು ಗಂಗರಾಜು ಹೇಳಿದ್ದರು.

ಮುಡಾ ವಿರುದ್ಧದ ಆರೋಪವೇನು?: ಭೂಮಿ ವಶಪಡಿಸಿಕೊಂಡ ಜಾಗ ಬಿಟ್ಟು ಅಥವಾ ಸಮಾನಾಂತರವಾದ ಜಾಗ ಬಿಟ್ಟು ವಿಜಯನಗರದಲ್ಲಿ ಅಭಿವೃದ್ಧಿ ಆಗಿರುವ 38ಸಾವಿರದ 284 ಚದರಡಿ ಭೂಮಿ ಹಂಚಿಕೆ ಮಾಡಲಾಗಿದೆ. ಅಲ್ಲದೇ, 1998ರಲ್ಲಿ ಕಳೆದುಕೊಂಡ ಭೂಮಿಗೆ 2021ರಲ್ಲಿ ಪರಿಹಾರ ನೀಡಲಾಗಿದೆ ಎಂಬುದು ಆರ್‌ಟಿಐ ಕಾರ್ಯಕರ್ತರ ಆರೋಪವಾಗಿದೆ. ದೇವನೂರು ಬಡಾವಣೆಯಲ್ಲಿ ಸಾವಿರಾರು ಸೈಟ್ ಇದ್ದರೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ? ಇದು ಲಾಭದ ಉದ್ದೇಶ ಅಲ್ಲವೇ. ಈ ಹಿಂದಿನ ಮೂಡಾ ಆಯುಕ್ತ ನಟೇಶ್ ಈ ಆದೇಶ ಮಾಡಿದ್ದು, ಸಿಎಂ ಪತ್ನಿ ಆರ್ಥಿಕ ಲಾಭವನ್ನು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಕೋರ್ಟ್​ ಹೇಳಿದ್ದೇನು?

ಪ್ರಾಸಿಕ್ಯೂಷನ್​ಗೆ ಖಾಸಗಿ ದೂರುದಾರರೇ ಅನುಮತಿ ಕೋರಬಹುದಾಗಿದೆ. 17ಎ ಅಡಿಯಲ್ಲಿ ಅನುಮತಿ ಕೋರಿರುವ ಕ್ರಮ ಸರಿಯಾಗಿದೆ. ರಾಜ್ಯಪಾಲರು ಸಚಿವ ಸಂಪುಟದ ಶಿಫಾರಸು ತಿರಸ್ಕರಿಸಿದ್ದು ಸೂಕ್ತವಾಗಿದೆ. 17ಎ ಅಡಿ ಪ್ರಾಸಿಕ್ಯೂಷನ್​ಗೆ ಆದೇಶ ಹೊರಡಿಸಿರುವುದು ಸಮರ್ಪಕವಾಗಿದೆ. ಇಲ್ಲಿ ರಾಜ್ಯಪಾಲರು ತಮ್ಮ ವಿವೇಚನೆಯನ್ನು ಬಳಸಿದ್ದಾರೆ ಎಂದು ತೀರ್ಪು ಪ್ರಕಟಿಸುವಾಗ ಹೈಕೋರ್ಟ್​ ಹೇಳಿತು.

ನ್ಯಾಯಾಲಯದ ಆದೇಶದಿಂದ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಈ ಆದೇಶಕ್ಕೆ ತಡೆ ನೀಡುವಂತೆ ಸಿಎಂ ಪರ ವಕೀಲರ ಮನವಿ ಮಾಡಿದ್ದರು. ಆದರೆ ನ್ಯಾಯಪೀಠ ‌ನಿರಾಕರಿಸಿದ್ದು, ರಾಜ್ಯಪಾಲರ ಕ್ರಮವನ್ನು ಎತ್ತಿಹಿಡಿದಿದೆ. ಈ ಪ್ರಕರಣದಲ್ಲಿ ಸಿಎಂ ಕುಟುಂಬಸ್ಥರು ಫಲಾನುಭವಿಗಳಾಗಿದ್ದು, ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. ಹೀಗಾಗಿ ಸೂಕ್ತ ತನಿಖೆ ಅಗತ್ಯ ಎಂದು‌ ನ್ಯಾಯಪೀಠ ಅಭಿಪ್ರಾಯ ಪಟ್ಟಿದ್ದು, ಸಿಎಂ ಎತ್ತಿದ್ದ ಎಲ್ಲ ಕಾನೂನಿನ ಪ್ರಶ್ನೆಗಳನ್ನು ತಳ್ಳಿ ಹಾಕಿದೆ.

ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ: ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ದಿಢೀರ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ನಾಳೆಯೇ ಶಾಸಕಾಂಗ ಪಕ್ಷದ ಸಭೆ ಕರೆದು ಮುಡಾ ಹಗರಣದ ಕುರಿತು ಸಮಾಲೋಚನೆ ನಡೆಸಲು ಮುಂದಾಗಿದ್ದಾರೆ.

ಶಾಸಕಾಂಗ ಪಕ್ಷದ ಸಭೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ 12:30ಕ್ಕೆ ವಿಧಾನಸೌಧದಲ್ಲಿ ಸಚಿವ ಸಂಪುಟ ನಡೆಸಲಿದ್ದಾರೆ. ರಾಜ್ಯಪಾಲರು ಬೇರೆ ಬೇರೆ ಪ್ರಕರಣಗಳಲ್ಲಿ ವರದಿ ಕೇಳಿ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರಗಳಿಗೆ ಹೇಗೆ ಉತ್ತರ ಕೊಡಬೇಕೆಂಬುವುದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.