ಜಿಲ್ಲೆ

ಜವಳಿ ಪಾರ್ಕ್ ಸ್ಥಾಪನೆಗೆ ಬದ್ಧ ; ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಹೇಳಿಕೆ


ಮಸ್ಕಿಯಲ್ಲಿ ಪುರಸಭೆ, ಗ್ರಂಥಾಲಯ ಕಟ್ಟಡ ಉದ್ಘಾಟನೆ

ಮಸ್ಕಿ: ಜಿಲ್ಲೆಯಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ಬದ್ಧನಾಗಿದ್ದೇನೆ. ಜಿಲ್ಲಾಡಳಿತ 15 ಎಕರೆ ಜಮೀನು ನೀಡಿದರೆ ಜವಳಿ ಪಾರ್ಕ್ ಸ್ಥಾಪಿಸಲಾಗುವುದು ಎಂದು ಜವಳಿ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಹೇಳಿದರು.

ಪಟ್ಟಣದಲ್ಲಿ ಪುರಸಭೆ ಹಾಗೂ ಹೈಟೆಕ್ ಗ್ರಂಥಾಲಯ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಜವಳಿ ಪಾರ್ಕ್ ಸ್ಥಾಪನೆಯಿಂದ 25 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾರ್ವಜನಿಕರ ಹಿತದೃಷ್ಟಿಯಿಂದ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿವೆ ಎಂದರು.

ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಬಿತ್ತನೆ ಬೀಜ ಮತ್ತು ಗೊಬ್ಬರದ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಒಂದು ವೇಳೆ ಲೋಪ ಕಂಡುಬಂದರೆ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿ ಮಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಸುಸಜ್ಜಿತವಾದ ಗ್ರಂಥಾಲಯ ಕಟ್ಟಡ ನಿರ್ಮಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದರು.