ವಿಜಯವಾಣಿ ಸುದ್ದಿಜಾಲ ಉಡುಪಿ
ಜಿಲ್ಲಾದ್ಯಂತ ಮುಸ್ಲಿಂ ಸಮುದಾಯದವರು ಈದುಲ್ ಅಝಾ (ಬಕ್ರೀದ್) ಹಬ್ಬವನ್ನು ಜೂನ್ 7ರಂದು ಸಂಭ್ರಮ, ಸಡಗರದಿಂದ ಆಚರಿಸಿದರು. ಉಡುಪಿ ನಗರ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು.
ಉಡುಪಿಯ ಜಾಮಿಯಾ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನಾ ಇನಾಯುತುಲ್ಲಾ ರಝ್ವಿ ಹಾಗೂ ಬ್ರಹ್ಮಗಿರಿ ಹಾಶಿಮಿ ಮಸೀದಿಯ ಇಮಾಮ್ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು.
ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.
ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಧರ್ಮಗುರುಮೌಲಾನ ಕರಾರ್ ಹುಸೇನ್ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನೆರವೇರಿತು. ಮಸೀದಿಗಳಲ್ಲಿ ಮಾತನಾಡಿದ ಧರ್ಮಗುರುಗಳು ಶಾಂತಿ, ಸೌಹಾರ್ದತೆಯ ಸಂದೇಶ ನೀಡಿದರು.
ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಉಡುಪಿ ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಸಾಮಾಜಿಕ ಜಾಲತಾಣಗಳಲ್ಲಿ ಅನ್ಯ ಸಮಾಜದವರನ್ನು ನಿಂದಿಸುವುದು ಅಥವಾ ಅವಹೇಳನದ ಪೋಸ್ಟ್ ಹಾಕಬಾರದು. ಡ್ರಗ್ಸ್ ಸೇವನೆಯಿಂದ ಹಲವಾರು ಯುವಕರು ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಪಾಲಕರು ಎಚ್ಚರಿಕೆ ವಹಿಸಬೇಕು. ತಮ್ಮ ಮಕ್ಕಳನ್ನು ಇಂತಹ ಮಾದಕ ಪದಾರ್ಥಗಳಿಂದ ದೂರ ಇರುವಂತೆ ನೋಡಿಕೊಳ್ಳಬೇಕು. | ಇಮಾಮ್ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ. ಬ್ರಹ್ಮಗಿರಿಯ ಹಾಶಿಮಿ ಮಸೀದಿ.