ಜಿಲ್ಲೆ

ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಗುರಿ

ಕೆ.ಎಂ.ದೊಡ್ಡಿ: ಮದ್ದೂರು ಕ್ಷೇತ್ರದಲ್ಲಿ ಗ್ರಾಮಸ್ಥರು, ಜನರ ಮನವಿಗೆ ಪೂರಕವಾಗಿ ವಿವಿಧ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಕದಲೂರು ಉದಯ್ ತಿಳಿಸಿದರು

ಸಮೀಪದ ಕಳ್ಳಿಮೆಳ್ಳೆದೊಡ್ಡಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಸುಮಾರು 20 ಲಕ್ಷ ರೂ.ವೆಚ್ಚದಲ್ಲಿ ಗ್ರಾಮ ಪರಿಮಿತಿ ರಸ್ತೆ ಅಭಿವೃದ್ಧಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೆರಿಸಿ ಮಾತನಾಡಿ, ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ರಸ್ತೆಗಳನ್ನು ಅಭಿವೃದ್ಧಿಪಡಿಸಿ ಗ್ರಾಮಸ್ಥರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದರು.

ತಾಲೂಕಿನ ಹಲವು ಗ್ರಾಮಗಳಲ್ಲಿ ರಸ್ತೆಗಳು ದುರಸ್ಥಿಗೊಂಡಿದ್ದವು. ಹಲವು ಗ್ರಾಮಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರು ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸಾಕಷ್ಟು ಮನವಿ ಪತ್ರಗಳನ್ನು ಸಲ್ಲಿಸಿದ್ದರು. ಅವರ ಮನವಿಗೆ ಪೂರಕವಾಗಿ ಹಂತ ಹಂತವಾಗಿ ಪಟ್ಟಣ ಮತ್ತು ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಕ್ಷೇತ್ರದಲ್ಲಿ ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು.

ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಮುಖ್ಯ ಗುರಿ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿಯೂ ಗ್ರಾಮಗಳ ರಸ್ತೆ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಪಡಿಸಲಾಗುವುದು ಎಂದರು.

ಲೋಕೋಪಯೋಗಿ ಇಲಾಖೆ ಎಇಇ ದೇವಾನಂದ್, ಎಇ ಹನುಮಂತು, ಗುತ್ತಿಗೆದಾರ ಮಹೇಶ್, ಗ್ರಾಮದ ಮುಖಂಡರಾದ ಕೆ.ಎಸ್.ಶಿವಲಿಂಗೇಗೌಡ, ಶರತ್, ಸಿದ್ಧರಾಮ, ರಾಮು, ಸ್ವಾಮಿ, ಮಠದದೊಡ್ಡಿ ವೀರೇಂದ್ರ, ಅಜ್ಜಹಳ್ಳಿ ಮನು ಇದ್ದರು.