ಜಿಲ್ಲೆ

ಮೈಸೂರು-ಬೆಂಗಳೂರು ರಸ್ತೆ ಸಂಚಾರ ತಡೆದು ಆಕ್ರೋಶ

ಪ್ರಸಿನ್ ಕೆ.ಆರ್

ಮದ್ದೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಕಾಂಗ್ರೆಸ್ ಪಕ್ಷದ ನಾಯಕರು ವ್ಯವಸ್ಥಿತ ಷಡ್ಯಂತ್ರರೂಪಿಸುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಪಟ್ಟಣದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡರ ಪ್ರತಿಕೃತಿ ದಹಿಸಿ, ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಪ್ರತಿಭಟನೆಯ ನೇತೃತ್ವದ ವಹಿಸಿದ್ದ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಮಾತನಾಡಿ, ಪೆನ್‌ಡ್ರೈವ್ ವಿಚಾರದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಹಣಿಯಲು ಕಾಂಗ್ರೆಸ್ ಪಕ್ಷದ ನಾಯಕರು ಮುಂದಾಗಿರುವುದು ಸರಿಯಲ್ಲ ಎಂದರು.

ಕಾಂಗ್ರೆಸ್ ಪಕ್ಷದ ನಾಯಕರು ನಾಲಿಗೆ ಇದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮತ್ತು ಮಾಜಿಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದರು.

ಹೆಣ್ಣುಮಕ್ಕಳ ಬಗ್ಗೆ ಕಾಳಜಿ ಇದಿದ್ದರೆ ಪೆನ್‌ಡ್ರೈವ್‌ಗಳನ್ನು ಹಂಚಿದವರನ್ನು ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವರ ವಿರುದ್ಧ ಕೂಡಲೇ ಕಾಂಗ್ರೆಸ್ ಸರ್ಕಾರ ಕ್ರಮಕೈಗೊಳ್ಳಲಿ ಎಂದು ಒತ್ತಾಯಿಸಿದರು.

ಸಂಸದ ಪ್ರಜ್ವಲ್‌ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣವನ್ನು ಎಸ್.ಐ.ಟಿಗೆ ವಹಿಸಿದ್ದು ಅಲ್ಲಿನ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆವರ ಅಣತಿಯಂತೆ ತನಿಖೆ ನಡೆಸುತ್ತಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. ಈ ಕೂಡಲೇ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.

ಸಂಸದ ಪ್ರಜ್ವಲ್‌ರೇವಣ್ಣ ಒಂದು ವೇಳೆ ತಪ್ಪು ಮಾಡಿದ್ದರೆ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ. ಅವರನ್ನು ಗಲ್ಲಿಗೆರಿಸಲಿ ನಮ್ಮ ಅಭ್ಯಂತರವಿಲ್ಲ. ಆದರೆ, ಈ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಂಡು ಎಚ್.ಡಿ.ದೇವೇಗೌಡರ ಕುಟುಂಬಕ್ಕೆ ತೊಂದರೆಕೊಡುವುದನ್ನು ನಾವು ಸಹಿಸಲ್ಲ ಎಂದು ಹೇಳಿದರು.
ಡಿ.ಕೆ. ಶಿವಕುಮಾರ್ ಅವರ ಆಡಿಯೋ ತುಣುಕುಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ರಾತ್ರೋರಾತ್ರಿ ಬಂದಿಸಿದರು. ಇತಂಹ ಹಿಟ್ಲರ್ ಸರ್ಕಾರವನ್ನು ಹಿಂದೆದೂ ನೋಡಿರಲಿಲ್ಲ. ಪ್ರಜಾಪ್ರಭುತ್ವ ಉಳಿಯಬೇಕು ಎಂಬ ದೃಷ್ಟಿಯಿಂದ ಪ್ರತಿಭಟನೆ ಮಾಡಲಾಗುತ್ತಿದೆ ಎಂದರು.

ಬೆಂಗಳೂರಿನ ಪೊಲೀಸ್ ಠಾಣೆಗಳಿಗೆ ಹೋದರೆ ಕಾಂಗ್ರೆಸ್ ಶಾಸಕ ಕೆ.ಎಂ. ಉದಯ್ ಚರಿತ್ರೆ ಬಟಾ ಬಯಲಾಗುತ್ತದೆ. ಯಾರ ಚರಿತ್ರೆ ಏನು ಎಂದು ಎಲ್ಲರಿಗೂ ಗೊತ್ತಿದೆ. ಯಾರು ಹೆಣ್ಣು ಮಕ್ಕಳಿಗೆ ಎಷ್ಟು ಗೌರವ ಕೊಟ್ಟಿದ್ದಾರೆ ಎಂಬುವುದು ತಿಳಿದಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂಥವರನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಎಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ, ಪುರಸಭಾ ಸದಸ್ಯ ಪ್ರಿಯಾಂಕಾ ಅಪ್ಪುಗೌಡ, ಎಸ್.ಮಹೇಶ್, ವನಿತಾ, ಪ್ರಮೀಳಾ, ಸುರೇಶ್ ಕುಮಾರ್, ಗ್ರಾಪಂ ಸದಸ್ಯೆ ನಳಿನಾ, ತಾ.ಪಂ. ಮಾಜಿ ಅಧ್ಯಕ್ಷ ಜಿ.ಪಿ.ಯೋಗೇಶ್, ಮುಖಂಡ ರವಿ ಚನ್ನಸಂದ್ರ, ಗೆಜ್ಜಲಗೆರೆ ಯೋಗೇಶ್, ಅಪ್ಪು ಪಿ.ಗೌಡ, ರಮೇಶ್, ಹೊನ್ನೇಗೌಡ, ಲಿಂಗಯ್ಯ, ಮಲ್ಲರಾಜು, ವೀರಪ್ಪ ಇತರರು ಇದ್ದರು.