ಮಂಡ್ಯ: ರಾಜ್ಯದ ಸರ್ಕಾರಿ ಸ್ವಾಮ್ಯದ ಏಕೈಕ ಸಕ್ಕರೆ ಕಾರ್ಖಾನೆ ಎಂಬ ಹೆಗ್ಗಳಿಕೆ ಹೊಂದಿರುವ ಮೈಷುಗರ್ ಕಾರ್ಖಾನೆ ಪುನಶ್ಚೇತನ ಹಾಗೂ ದುಡಿಯುವ ಬಂಡವಾಳಕ್ಕಾಗಿ 50 ಕೋಟಿ ರೂಗಳನ್ನು ಜೂ.14ರಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.
ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರಕಿದ ಒಂದೇ ವಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಣ ಬಿಡುಗಡೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. 2023-24 ನೇ ಸಾಲಿನಲ್ಲಿ ಕಬ್ಬು ನುರಿಸಲು ಸರ್ಕಾರದಿಂದ ತುರ್ತಾಗಿ ಧನ ಸಹಾಯ ನೀಡಬೇಕೆಂದು ತಾವು ಮಾಡಿದ್ದ ಮನವಿಗೆ ಸ್ಪಂದಿಸಿ ಸಿಎಂ ತಕ್ಷಣವೇ ಹಣ ಬಿಡುಗಡೆಗೆ ವ್ಯವಸ್ಥೆ ಮಾಡಿದ್ದಾರೆ. ಇದು ಈ ಭಾಗದ ರೈತರಿಗೆ ವರದಾನವಾಗಿದೆ. ರೈತರ ಹಿತದೃಷ್ಟಿಯಿಂದ ಕೂಡಲೇ ಹಣ ಮಂಜೂರು ಮಾಡಲಾಗಿದೆ ಎಂದಿದ್ದಾರೆ.
ಕಬ್ಬು ಕಟಾವು ಪ್ರಾರಂಭವಾಗುವ ಮೊದಲು ಗ್ಯಾಂಗ್‌ಗಳಿಗೆ ನೀಡಲು ಹಣದ ಅವಶ್ಯಕತೆ ಇದೆ. ಯಂತ್ರಗಳ ದುರಸ್ತಿಗಳೂ ಇವೆ. ಅದಕ್ಕಾಗಿ ತಕ್ಷಣ ಹಣ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಲಾಗಿತ್ತು. ಹೀಗಾಗಿ ಕಾರ್ಖಾನೆ ಪ್ರಾರಂಭೋತ್ಸವ ಹಾಗೂ ಗ್ಯಾಂಗ್‌ಗಳಿಗೆ ನೀಡಲು 15 ಕೋಟಿ ರೂ ಹಾಗೂ ಕಾರ್ಖಾನೆಯ ದುಡಿಯುವ ಬಂಡವಾಳ (ವರ್ಕಿಂಗ್ ಕ್ಯಾಪಿಟಲ್) ಗಾಗಿ 35 ಕೋಟಿ ರೂ ನೀಡಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿತ್ತು. ಈಗ ರಾಜ್ಯ ಸರ್ಕಾರ ಅನುದಾನವನ್ನೂ ಬಿಡುಗಡೆ ಮಾಡಿದೆ.
ಸರ್ಕಾರದ ಈ ಸಹಾಯದಿಂದ ಅವಧಿಗೆ ಸರಿಯಾಗಿ ಕಾರ್ಖಾನೆಯಲ್ಲಿ ಕಬ್ಬು ನುರಿಸುವಿಕೆ ಪ್ರಾರಂಭಿಸಲು ಅನುಕೂಲವಾಗಲಿದೆ. ರೈತರಿಗೆ ಸಕಾಲದಲ್ಲಿ ಕಬ್ಬು ಕಟಾವು ಹಾಗೂ ಹಣ ಬಿಡುಗಡೆಗೂ ಸಹಕಾರಿಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.