ಮೈಸೂರಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಉಷಾರಾಣಿ, ಕೆ.ಕೆ.ಅಮರ್‌ನಾಥ್, ಎಸ್.ಲೋಕೇಶ್, ಎ.ಜಿ.ಸುಧೀರ್ ಅವರು ಹಲವು ಪ್ರಕರಣಗಳಲ್ಲಿ ರಾಜಿ ಸಂಧಾನ ಮಾಡಿದರು.
- ವಾಜ್ಯ ಪೂರ್ವ ಪ್ರಕರಣಗಳ ರಾಜಿ ಸಂಧಾನ
- ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆಯೋಜನೆ
ಮೈಸೂರು: ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಸಂಧಾನಕ್ಕಾಗಿ ತೆಗೆದುಕೊಂಡ ಪ್ರಕರಣಗಳಲ್ಲಿ 14,077 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.
ಮೈಸೂರು ನಗರ ಮತ್ತು ತಾಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ಒಟ್ಟು 1,30,887 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಅವುಗಳ ಪೈಕಿ 65,170 ಸಿವಿಲ್ ಪ್ರಕರಣಗಳು ಹಾಗೂ 65,666 ಕ್ರಿಮಿನಲ್ ಪ್ರಕರಣಗಳಿವೆ. ಪ್ರಸ್ತುತ ಸದರಿ ಪ್ರಕರಣಗಳಲ್ಲಿ 49,645 ಪ್ರಕರಣಗಳನ್ನು ರಾಜಿಯಾಗಬಹುದಾದ ಪ್ರಕರಣಗಳಿದ್ದು, ಅವುಗಳ ಪೈಕಿ 26,694 ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲಾಗಿತ್ತು. ಇದರಲ್ಲಿ 14,077 ಪ್ರಕರಣಗಳು ಇತ್ಯಾರ್ಥಗೊಂಡವು.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ಡಿ. 13ರಂದು ಮೈಸೂರು ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿತ್ತು.
ಈ ಬಾರಿಯ ಅದಾಲತ್‌ನಲ್ಲಿ ವಿಶೇಷವಾಗಿ ಸಂಚಾರ ನಿಯಮ ಉಲ್ಲಂಘನೆಯ ಶೇ.50ಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಜಿಲ್ಲೆಯಾದ್ಯಂತ ಒಟ್ಟು 10,41,732 ಪ್ರಕರಣಗಳು ವಿಲೇವಾರಿಯಾಗಿದ್ದು, ಸದರಿ ಪ್ರಕರಣಗಳಲ್ಲಿ ಒಟ್ಟು 23,61,37,150 ಸ್ವೀಕೃತವಾಗಿರುತ್ತದೆ.
ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20 ರ ಅವಧಿಯಲ್ಲಿ ದಾಖಲಾಗಿ, ಪಾವತಿಗೆ ಬಾಕಿಯಿರುವ ಪ್ರಕರಣಗಳ ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿಯನ್ನು ನೀಡಿದ್ದು, ಜಿಲ್ಲೆಯಾದ್ಯಂತ ಒಟ್ಟು 116 ಪ್ರಕರಣಗಳು ಇತ್ಯರ್ಥವಾಗಿದ್ದು, 141,900 ರೂ. ಸ್ವೀಕೃತವಾಗಿರುತ್ತದೆ.
ಕೌಟುಂಬಿಕ ವಿವಾದದ ಪ್ರಕರಣಗಳಲ್ಲಿ ಮೈಸೂರು ನಗರ ಹಾಗೂ ಮೈಸೂರು ತಾಲೂಕು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು 42 ದಂಪತಿಗಳು ತಮ್ಮ ಮಧ್ಯದ ವಾಜ್ಯಗಳನ್ನು ಬಗೆಹರಿಸಿಕೊಂಡು ಒಂದಾಗಿರುತ್ತಾರೆ. ಎಲ್ಲ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜಿ ಸಂಧಾನ ಮೂಲಕ ಒಟ್ಟು 73,55,63,277 ರೂ. ಮೊತ್ತಗಳು ಇತ್ಯರ್ಥವಾಗಿರುತ್ತದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾರಾಣಿ, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಕೆ.ಅಮರ್‌ನಾಥ್, ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಸ್.ಲೋಕೇಶ್, ಕಾರ್ಯದರ್ಶಿ ಎ.ಜಿ.ಸುಧೀರ್ ಇತರರಿದ್ದರು.