ಡಿ.ಕೆ.ಶಿವಕುಮಾರ್ 
ಮೈಸೂರು

31ರಂದು ಸಿಎಂ ಡಿ.ಕೆ.ಶಿವಕುಮಾರ್‌ಗೆ ಅದ್ದೂರಿ ಸ್ವಾಗತ

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸುತ್ತಿರುವ ಡಿ.ಕೆ.ಶಿವಕುಮಾರ್ ಅವರನ್ನು ಜುಲೈ 31ರಂದು ಅದ್ದೂರಿಯಾಗಿ ಸ್ವಾಗತಿಸಲಾಗುವುದು ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದರು.
ಮುಖ್ಯಮಂತ್ರಿಯಾದ ಬಳಿಕ ಡಿ.ಕೆ.ಶಿವಕುಮಾರ್ ಅವರು ಹಲವಾರು ಜಿಲ್ಲೆಗಳಿಗೆ ಭೇಟಿ ನೀಡಿದ್ದಾರೆ. ಆದರೆ ಕಾರ್ಯಭಾರದ ಕಾರಣಕ್ಕಾಗಿ ಮೈಸೂರು ಜಿಲ್ಲೆಗೆ ಒಮ್ಮೆಯೂ ಬರಲು ಸಾಧ್ಯವಾಗಿರಲಿಲ್ಲ. ಆಗಸ್ಟ್ 1ರಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶಿಷ್ಟಾಚಾರದ ಅನ್ವಯ ಅವರನ್ನು ಸ್ವಾಗತಿಸಲು ಮುಖ್ಯಮಂತ್ರಿ ಅವರು ಬರಲೇಬೇಕು. ಒಂದು ದಿನ ಮುಂಚಿತವಾಗಿ ಬರುವಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೆಲ್ಲರೂ ಮನವಿ ಮಾಡಿದ್ದೆವು. ಮುಖ್ಯಮಂತ್ರಿಗಳು ಒಪ್ಪಿದ ಹಿನ್ನೆಲೆಯಲ್ಲಿ ಅಂದು ಜೆ.ಕೆ.ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಸಮಾವೇಶ ಆಯೋಜಿಸಿದ್ದೇವೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಆಗಸ್ಟ್ 1ರಂದು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ಇರುವುದರಿಂದ ಭದ್ರತೆ ಹಾಗೂ ಇತರ ಕಾರಣಗಳಿಂದ ಅಂದು ಸ್ವಾಗತ ಕಾರ್ಯಕ್ರಮ ಆಯೋಜಿಸಲು ಸಾಧ್ಯವಿಲ್ಲ. ಆದ್ದರಿಂದ ಜುಲೈ 31ರಂದು ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಎಐಸಿಸಿ ವೀಕ್ಷಕ ರಾಜೇಶ್ ಠಾಕೂರ್ ಸೇರಿದಂತೆ ಕಾಂಗ್ರೆಸ್‌ನ ಅನೇಕ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ಶಾಸಕರಾದ ಕೆ.ಹರೀಶ್‌ಗೌಡ, ದರ್ಶನ್ ಧ್ರುವನಾರಾಯಣ್, ಡಿ.ರವಿಶಂಕರ್, ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಮತ್ತಿತರರಿದ್ದರು.