ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಯಲು ಶಾಸಕ ದರ್ಶನ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. 
ಮೈಸೂರು

ವನ್ಯಪ್ರಾಣಿಗಳ ಫೇಕ್ ವಿಡಿಯೋ ಮಾಡುವವರ ವಿರುದ್ಧ ಕ್ರಮ

ಪ್ರಮುಖ ಮುಖ್ಯಾಂಶಗಳು

  • ಶಾಸಕ ದರ್ಶನ್ ಧ್ರುವನಾರಾಯಣ ಎಚ್ಚರಿಕೆ
  • ಅರಣ್ಯ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯಿತಿಯ ಪಿಡಿಒಗಳ ಸಭೆ
  • ಚಿರತೆ ಮತ್ತು ಹುಲಿ ಸೆರೆಗೆ ಒತ್ತಾಯ

ಶಾಸಕ ದರ್ಶನ್ ಧ್ರುವನಾರಾಯಣ ಎಚ್ಚರಿಕೆ

ನಂಜನಗೂಡು: ಸಾಮಾಜಿಕ ಜಾಲತಾಣದಲ್ಲಿ ನಂಜನಗೂಡು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿ ಓಡಾಡಿರುವ ನಕಲಿ ವಿಡಿಯೋಗಳನ್ನು ಹರಿಬಿಡುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಶಾಸಕ ದರ್ಶನ್ ಧ್ರುವನಾರಾಯಣ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.
ಪಕ್ಕದ ಸರಗೂರು ತಾಲೂಕಿನ ಬಡಗಲಪುರ ಮತ್ತು ಕೂಡಗಿ ಗ್ರಾಮಗಳಲ್ಲಿ ಹುಲಿ ದಾಳಿಗೆ ಈಗಾಗಲೇ ಮೂವರು ರೈತರು ಬಲಿಯಾಗಿದ್ದಾರೆ. ಆದ್ದರಿಂದ ನಮ್ಮ ತಾಲೂಕಿನಲ್ಲಿ ಈ ಘಟನೆಗಳು ನಡೆಯದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ತಾಲೂಕಿನ ಕಾಡಂಚಿನ ಪ್ರದೇಶದ ಗ್ರಾಮಗಳಲ್ಲಿ ಮತ್ತು ನಗರ ಪ್ರದೇಶದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿ ಮತ್ತು ಚಿರತೆ ಹಾಗೂ ಕಾಡು ಪ್ರಾಣಿಗಳ ಹಾವಳಿಯಿಂದ ಮಾನವ ಮತ್ತು ಪ್ರಾಣಿಗಳ ಸಂಘರ್ಷ ಮುಂದುವರಿದಿದ್ದು, ರೈತರಿಗೆ ಉಂಟಾಗುತ್ತಿರುವ ಹಾನಿಯನ್ನು ತಡೆಗಟ್ಟಲು ತುರ್ತು ಸಭೆ ನಡೆಸಿದ್ದೇವೆ. ಕಾಡಿನಿಂದ ನಾಡಿಗೆ ಬರುತ್ತಿರುವ ಕಾಡುಪ್ರಾಣಿಗಳಿಂದ ರೈತರಿಗೆ ತುಂಬ ತೊಂದರೆಯಾಗುತ್ತಿದೆ. ಹುಲಿ ಮತ್ತು ಚಿರತೆ ಬರುತ್ತಿರುವ ಬಗ್ಗೆ ರೈತರು ಪ್ರತಿ ದಿನ ನನಗೆ ದೂರವಾಣಿ ಮೂಲಕ ಕರೆ ಮಾಡಿ ಸಮಸ್ಯೆಯನ್ನು ಹೇಳಿಕೊಳ್ಳುತ್ತಿದ್ದಾರೆ. ಸಮಸ್ಯೆಯನ್ನು ನಿವಾರಿಸಲು ತಾಲೂಕು ಕಚೇರಿಯಲ್ಲಿ ದಿನದ 24 ಗಂಟೆಗಳು ಸಹಾಯವಾಣಿ ತೆರೆಯುವಂತೆ ಈಗಾಗಲೇ ಸೂಚನೆ ನೀಡಿದ್ದೇನೆ. ಯಾವುದೇ ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ತಕ್ಷಣವೇ ಕರೆ ಮಾಡುವಂತೆ ತಿಳಿಸಿದರು.
ಕಾಡುಪ್ರಾಣಿಗಳ ದಾಳಿ ಸಂದರ್ಭ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇಟ್ಟು ಚಿರತೆ ಮತ್ತು ಹುಲಿಯನ್ನು ಸೆರೆ ಹಿಡಿಯಬೇಕು. ಪ್ರತಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಬೇಕು. ಒಂದು ವೇಳೆ ಮತ್ತೆ ತಾಲೂಕಿನಲ್ಲಿ ಹುಲಿ ಅಥವಾ ಚಿರತೆ ದಾಳಿ ನಡೆಸಿದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ವಲಯ ಅರಣ್ಯ ಅಧಿಕಾರಿ ನಿತಿನ್‌ಕುಮಾರ್ ಮಾತನಾಡಿ, ಏಚಗುಂಡ್ಲ ಮತ್ತು ಸಿಂಗಾರಿಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಹುಲಿ ಬಂದಿದೆ ಎಂದು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು. ಈ ಹಿನ್ನೆಲೆಯಲ್ಲಿ ನಮ್ಮ ಸಿಬ್ಬಂದಿ ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಿದೆವು. ಹುಲಿ ಇರುವ ವಿಡಿಯೋವನ್ನು ಪರಿಶೀಲನೆ ಮಾಡಿದಾಗ ಇದು ನಕಲಿ ವಿಡಿಯೋ ಎಂದು ತಿಳಿದು ಬಂದಿದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ, ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ವಿಡಿಯೋಗಳನ್ನು ಹರಿಬಿಡುತ್ತಿರುವವರ ವಿರುದ್ಧ ಕಾನೂನು ರೀತಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ಡಿವೈಎಸ್ಪಿ ರಘು, ಮಾಜಿ ತಾಪಂ ಅಧ್ಯಕ್ಷ ನಾಗೇಶ್ ರಾಜ್, ಹೆಡಿಯಾಲ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್ ಸೇರಿದಂತೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.