ಸರಗೂರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಹೊಸ ಆಂಬುಲೆನ್ಸ್ ಕೊಡುಗೆ ನೀಡಿರುವುದು. 
ಮೈಸೂರು

ಸರಗೂರು ಸಿಎಚ್‌ಸಿಗೆ ಆಂಬುಲೆನ್ಸ್ ವ್ಯವಸ್ಥೆ

ಲಲಾಟಾಕ್ಷ ಎಸ್

ಸರಗೂರು:

ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ನೆರವಾಗುವಂತೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೊನೆಗೂ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಆರೋಗ್ಯ ಕೇಂದ್ರದಲ್ಲಿ ಇದ್ದ ಒಂದು ಆಂಬುಲೆನ್ಸ್ ಕೆಟ್ಟು ದುರಸ್ತಿಗೆ ಬಿಡಲಾಗಿತ್ತು. ಹಲವು ದಿನಗಳಾದರೂ ದುರಸ್ತಿಯಾಗಿರಲಿಲ್ಲ. ಇದರಿಂದ ತುರ್ತು ಸಂದರ್ಭದಲ್ಲಿ ರೋಗಿಗಳು ಪರದಾಡುವಂತಾಗಿತ್ತು. ಅಲ್ಲದೆ, ಗ್ರಾಮಾಂತರ ಭಾಗದ ಜನರು ಅಪಘಾತ, ಹೆರಿಗೆ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ತುರ್ತು ವಾಹನಕ್ಕೆ ಪರದಾಡಬೇಕಾದ ಸ್ಥಿತಿ ಇತ್ತು. ಈ ಕುರಿತು ಜೂ.29ರಂದು ವಿಜಯವಾಣಿ ‘ಲೌಡ್ ಸ್ಪೀಕರ್’ನಲ್ಲಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ವರದಿ ಪ್ರಕಟಿಸಿತ್ತು. ವರದಿ ಗಮನಿಸಿದ ಆರೋಗ್ಯ ಇಲಾಖೆ ಇದೀಗ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಿದೆ.
ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಪ್ರತಿಕ್ರಿಯಿಸಿ, ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಆಂಬುಲೆನ್ಸ್ ಸೇವೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ. ಅಗತ್ಯವಿರುವ ರೋಗಿಗಳನ್ನು ತುರ್ತು ಸಂದರ್ಭದಲ್ಲಿ ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲು ಇದರಿಂದ ಅನುಕೂಲವಾಗಲಿದೆ. ಸಾರ್ವಜನಿಕರಿಗೆ ಆರೋಗ್ಯ ಸೇವೆ ಸುಲಭವಾಗಿ ದೊರೆಯುವಂತೆ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದರು.
ತುರ್ತು ಸಂದರ್ಭದಲ್ಲಿ ಆಂಬುಲೆನ್ಸ್ ಸಿಗದೆ ರೋಗಿಗಳ ಕುಟುಂಬಸ್ಥರು ಸಂಕಷ್ಟ ಅನುಭವಿಸುತ್ತಿದ್ದರು. ‘ವಿಜಯವಾಣಿ’ಯಲ್ಲಿ ವರದಿ ಪ್ರಕಟವಾದ ಬಳಿಕ ಅಧಿಕಾರಿಗಳು ಸ್ಪಂದಿಸಿ ವ್ಯವಸ್ಥೆ ಕಲ್ಪಿಸಿರುವುದು ಸ್ವಾಗತಾರ್ಹ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.
ಡಿ.ಚಿನ್ನಸ್ವಾಮಿ, ದಡದಹಳ್ಳಿ
ಸರ್ಕಾರಿ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಿರುವುದು ಆರೋಗ್ಯ ಸೇವೆ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ. ಈ ಸೇವೆ ನಿರಂತರವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ತುರ್ತು ಸಮಯದಲ್ಲಿ ಯಾವುದೇ ರೋಗಿಯೂ ಆಂಬುಲೆನ್ಸ್‌ಗಾಗಿ ಪರದಾಡದಂತೆ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ವಿಜಯವಾಣಿ ವರದಿಯಿಂದ ಎಚ್ಚೆತ್ತು ಆರೋಗ್ಯ ಇಲಾಖೆ ಆಂಬುಲೆನ್ಸ್ ಸೌಕರ್ಯ ಕಲ್ಪಿಸಿರುವುದು ಶ್ಲಾಘನೀಯ.
ಚೈತ್ರಾ ಸ್ವಾಮಿ, ಸರಗೂರು ಪಪಂ ಅಧ್ಯಕ್ಷೆ