ಸಮಾಜ ಕಲ್ಯಾಣ ಇಲಾಖೆಯ ಬಾಬು ಜಗಜೀವನ ರಾಮ್ ಭವನದಲ್ಲಿ ಗುರುವಾರ ಸಭೆ ನಡೆಯಿತು. 
ಮೈಸೂರು

ವಸತಿ ಸೌಲಭ್ಯಕ್ಕೆ ಸ್ಥಳೀಯ ಸಂಸ್ಥೆಗಳಲ್ಲಿ ಅರ್ಜಿ ಸಲ್ಲಿಸಿ

ಅವಿನಾಶ್ ಜೈನಹಳ್ಳಿ
ಮೈಸೂರು: ಪೌರಕಾರ್ಮಿಕರು ವಸತಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವಾಗ ಮೊದಲು ತಮ್ಮ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಲ್ಲಿ ಅರ್ಜಿ ಸಲ್ಲಿಸಬೇಕು. ಅಲ್ಲಿ ತೊಂದರೆ ಇದ್ದಲ್ಲಿ ಮಾತ್ರ ಸಮಿತಿಗೆ ಅರ್ಜಿ ಸಲ್ಲಿಸಿ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಬಾಬು ಜಗಜೀವನ ರಾಮ್ ಭವನದಲ್ಲಿ ಗುರುವಾರ ಆಯೋಜಿಸಲಾಗಿದ್ದ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯಲ್ಲಿ ಮಾತನಾಡಿದರು.
ಪೌರಕಾರ್ಮಿಕರಿಗೆ ಹೊರಗುತ್ತಿಗೆ ಆಧಾರದ ಮೇಲೆ ವೇತನ ಪಾವತಿಸಿದ ನಂತರ ಅವರಿಗೆ ಇಎಸ್‌ಐ ಹಾಗೂ ಪಿಎಫ್ ಪಾವತಿಯ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು ಎಂದರು.
ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ಜಿಲ್ಲೆಯಾದ್ಯಂತ ನಗರ ವ್ಯಾಪ್ತಿ 20 ವಸತಿ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 1,016 ವಸತಿಗಳನ್ನು ನಿರ್ಮಾಣ ಮಾಡಿಕೊಡಲು ಗುರಿ ನಿಗದಿಯಾಗಿದ್ದು, ಈ ಕುರಿತಂತೆ ತಾಲೂಕುವಾರು ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿದರು.
ಪೌರ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳಿಗೆ ಸಾಲ ಸೌಲಭ್ಯಗಳನ್ನು ಒದಗಿಸುವ ಸಂದರ್ಭ ಬ್ಯಾಂಕ್‌ಗಳಿಂದ ನಿಗದಿತ ದಾಖಲೆಗಳನ್ನು ಪಡೆದುಕೊಂಡು ತೊಂದರೆಯಾಗದಂತೆ ನೋಡಿಕೊಳ್ಳಿ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಯುಕೇಶ್ ಕುಮಾರ್ ಮಾತನಾಡಿ, ಹೊರಗುತ್ತಿಗೆ ನೌಕರರಿಗೆ ಸರ್ಕಾರ ನಿಗದಿಪಡಿಸಿರುವ ರೀತಿ ಕನಿಷ್ಠ ವೇತನವನ್ನು ನೀಡಿ. ಈ ಕುರಿತಂತೆ ಮುಂದಿನ ದಿನಗಳಲ್ಲಿ ಪರಿಶೀಲನೆ ನಡೆಸಲಾಗುವುದು ಎಂದರು.
ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಂಗೇಗೌಡ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸವಿತಾ, ಸಮಿತಿಯ ಸದಸ್ಯರಾದ ಡಿ.ಆರ್.ರಾಜು, ನಂಜಪ್ಪ, ಮಂಜುನಾಥ್, ವಸಂತಕುಮಾರಿ, ದೀಪ, ಚಲುವರಾಜು ಇತರರಿದ್ದರು.